ಮಡಿಕೇರಿ, ಮೇ 5- ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ (ಇಂದು ಬೆಳಗ್ಗೆ 8 ಗಂಟೆಯವರೆಗೆ) 12 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗಿನ ಒಟ್ಟು 145 ಮಂದಿ ಮೃತಪಟ್ಟಿರುವುದು ಆತಂಕ ಮೂಡಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 13,813 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 396 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ ಒಟ್ಟು 9017 ಮಂದಿ ಗುಣಮುಖರಾಗಿದ್ದಾರೆ.
4651 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 484 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 681 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 651 ಆರ್.ಟಿ.ಪಿ.ಸಿ.ಆರ್ ಮತ್ತು 30 ಪ್ರಕರಣಗಳು ರಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಕಂಡು ಬಂದಿದೆ.
ಮಡಿಕೇರಿ ತಾಲ್ಲೂಕಿನಲ್ಲಿ ಅತಿಹೆಚ್ಚು 313 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದೆÉ. ಈ ಪೈಕಿ 299 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 14 ಪ್ರಕರಣಗಳು ರಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ 181 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 187 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿದೆ.