40% ಅಲ್ಲ 50% ಕಮಿಷನ್ ಸರ್ಕಾರ!
News

40% ಅಲ್ಲ 50% ಕಮಿಷನ್ ಸರ್ಕಾರ!

August 25, 2022

ಬೆಂಗಳೂರು, ಆ.24-ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ 40% ಅಲ್ಲ 50% ರಷ್ಟು ಕಮಿಷನ್ ತೆಗೆದುಕೊಳ್ಳುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ದೂರಿದ್ದಾರೆ.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣರಿಂದ ಪರ್ಸೆಂಟೇಜ್‍ಗೆ ಸಂಬಂಧಿಸಿದಂತೆ ದೂರು ಸ್ವೀಕರಿಸಿ, ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ಭ್ರಷ್ಟಾಚಾರ ತಾರಕಕ್ಕೇರಿದೆ ಎಂದರು.

ಆ ಮೂಲಕ ಪರ್ಸೆಂಟೇಜ್ ಆರೋಪದ ಧೂಳು ಮತ್ತೊಮ್ಮೆ ಸರ್ಕಾರದ ಮೇಲೆ ಕವಿದಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ತಾರಕಕ್ಕೇ ರುವ ಲಕ್ಷಣಗಳಿವೆ. ಈ ವಿಚಾರವನ್ನು ತಾವು ವಿಧಾನಸಭೆಯಲ್ಲಿ ಒತ್ತಾಯ ಮಾಡಬೇಕು ಎಂದು ನನಗೆ ಮನವಿ ಮಾಡಿದ್ದರು. ಟೆಂಡರ್ ಅನುಮೋದನೆಗೆ ಮೊದಲೇ 30 ರಿಂದ 40% ಲಂಚ ಕೊಡಬೇಕಾಗಿದೆ.

ಪ್ರಧಾನಿಗಳಿಗೆ ಪತ್ರ ಬರೆದು ಒಂದು ವರ್ಷ ಆದರೂ ಅವರೂ ಯಾವುದೇ ಕ್ರಮ ಕೈಗೊಂಡಿಲ್ಲ. ನಾವು ನ್ಯಾಯಾಂಗ ತನಿಖೆ ನಡೆಸುವುದಾದರೆ ದಾಖಲಾತಿ ಕೊಡಲು ತಯಾರಾಗಿದ್ದೇವೆ. ಒಂದು ವೇಳೆ ನಮ್ಮಿಂದ ಇದನ್ನು ಸಾಬೀತು ಮಾಡಲು ಆಗದೆ ಹೋದರೆ ಯಾವುದೇ ರೀತಿಯ ಕಾನೂನು ಕ್ರಮ ಎದುರಿಸಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ. ನಾನು ಕೂಡ ಹೈಕೋರ್ಟ್‍ನ ಹಾಲಿ ನ್ಯಾಯಾಧೀಶರ ಉಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆ ಮಾಡಿ ಎಂದು ಒತ್ತಾಯ ಮಾಡಿದ್ದೆ. ಸರ್ಕಾರ ಇದಕ್ಕೆ ಒಪ್ಪುತ್ತಾ ಇಲ್ಲ. ಭ್ರಷ್ಟಾಚಾರ ಎಲ್ಲಾ ಕಾಲದಲ್ಲೂ ಆಮೆ ವೇಗದಲ್ಲಿ ಇತ್ತು, ಈಗ ಶರವೇಗದಲ್ಲಿ ನಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘದವರು ಹೇಳಿದ್ದಾರೆ. ಗುತ್ತಿಗೆದಾರರಿಗೆ ಜಲಸಂಪನ್ಮೂಲ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಹಾಗೂ ಬಿಬಿಎಂಪಿಯಿಂದ ಸುಮಾರು 22,000 ಕೋಟಿಗೂ ಅಧಿಕ ಹಣ ಬಿಡುಗಡೆಯಾಗ ಬೇಕಿದೆಯಂತೆ. ಈ ಬೃಹತ್ ಬಾಕಿ ಮೊತ್ತವನ್ನು ಆದ್ಯತೆ ಮೇಲೆ ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಇನ್ನೊಂದು ವಿಚಾರವೆಂದರೆ ಅನುದಾನ ಮೀಸಲಿಡದೆ ಟೆಂಡರ್ ಕರೆಯುತ್ತಾರೆ. ಇದರಿಂದ ಕಾಮಗಾರಿ ಹಣ ಬಿಡುಗಡೆ ಆಗುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ. ನಾವು ಸರ್ಕಾರದ ಮೇಲೆ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಡ ಹಾಕುತ್ತೇವೆ. ಒಂದು ವೇಳೆ ಸರ್ಕಾರ ನಮ್ಮ ಆಗ್ರಹಕ್ಕೆ ಬೆಲೆ ಕೊಡದೆ ಹೋದರೆ ಈ ವಿಚಾರವನ್ನು ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ.

ಮುನಿರತ್ನ ಅವರ ಹೆಸರು ಪ್ರಸ್ತಾಪ ಮಾಡಿದ್ದಾರೆ. ಇದರ ಜೊತೆಗೆ ನೀರಾವರಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಇಲಾಖೆ, ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳಲ್ಲೂ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ನರೇಂದ್ರ ಮೋದಿ ಅವರು ಚುನಾವಣಾ ಭಾಷಣದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ 10% ಕಮಿಷನ್ ಸರ್ಕಾರ ಎಂದು ಆರೋಪ ಮಾಡಿದಾಗ ಎಲ್ಲರೂ ಅದಕ್ಕೆ ಪ್ರಚಾರ ನೀಡಿದರು. ಯಾರು ಅವರ ಬಳಿ ದಾಖಲೆ ಕೇಳಿಲ್ಲ. ಈಗ ಗುತ್ತಿಗೆದಾರರ ಸಂಘದವರು ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತು ಮಾಡಲು ಸಿದ್ಧರಿದ್ದಾರೆ. ತನಿಖೆ ಆಗಬೇಕೋ ಬೇಡವೋ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

Translate »