ಸೆಪ್ಟೆಂಬರ್‌ನಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಗೆ ಸಿಎಂ ಚಾಲನೆ
ಮೈಸೂರು

ಸೆಪ್ಟೆಂಬರ್‌ನಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಗೆ ಸಿಎಂ ಚಾಲನೆ

August 5, 2018

ಮೈಸೂರು: ಮೈಸೂರು-ಬೆಂಗಳೂರು 10 ಪಥದ ರಸ್ತೆ ಕಾಮಗಾರಿಗೆ ಇದೇ ಸೆಪ್ಟೆಂಬರ್‌ನಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.

ಮೈಸೂರಿನ ಸುತ್ತೂರು ಮಠದ ಆವರಣದಲ್ಲಿ ಶನಿವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರದಿಂದ ಮಂಜೂರಾಗಿರುವ ಮೈಸೂರು-ಬೆಂಗಳೂರು ನಡುವೆ 10 ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಸೆಪ್ಟೆಂಬರ್‌ನಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವನಾಗಿ ಮೈಸೂರು ನಗರ ಹಾಗೂ ಜಿಲ್ಲೆಗೆ ಸಮರ್ಪಕ ಕುಡಿಯುವ ನೀರು ಪೂರೈಸುವ ವ್ಯವಸ್ಥೆಗೆ ಅಗತ್ಯ ಕಾರ್ಯಕ್ರಮ ರೂಪಿಸುವುದು ನನ್ನ ಮೊದಲ ಆದ್ಯತೆ. ಜೊತೆಗೆ ಮೈಸೂರು ನಗರ ಮತ್ತು ಜಿಲ್ಲೆಯಲ್ಲಿ ಎಲ್ಲ ಬಡ ವಸತಿರಹಿತರಿಗೆ ವಸತಿ ಕಲ್ಪಿಸಲು ಪಕ್ಷಾತೀತವಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಕ್ರಮ ರೂಪಿಸಲಾಗುವುದು ಎಂದರು.

ಶೇ. 100ಕ್ಕೆ 100 ಮುಕ್ತ ವಿವಿಗೆ ಮಾನ್ಯತೆ ದೊರೆಯುವ ವಿಶ್ವಾಸವಿದೆ. ಈ ಬಾರಿ ಉತ್ತಮ ಮಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮನೆ ಮಾಡಿದೆ. ಇಂತಹ ಸಂತಸದ ವಾತಾವರಣದಲ್ಲಿ ಈ ಬಾರಿ ದಸರಾ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಈ ಸಂಬಂಧ ಕೈಗೊಳ್ಳಬೇಕಿರುವ ಅಭಿವೃದ್ಧಿ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದಾರೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಸಂಬಂಧ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಯಾವ ರೀತಿ ತೀರ್ಮಾನ ಕೈಗೊಳ್ಳುತ್ತಾರೋ ಕಾದು ನೋಡಬೇಕು. ನಮ್ಮ ವರಿಷ್ಠರ ನಿರ್ಧಾರದಂತೆ ಎಲ್ಲವೂ ನಡೆಯಲಿದೆ ಎಂದ ಅವರು, ಲೋಕಸಭಾ ಚುನಾವಣೆಗೆ ತಮ್ಮ ಪುತ್ರ ಹರೀಶ್‍ಗೌಡ ಅವರನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮೈಸೂರಿನಲ್ಲಿ ಮೋನೋ ರೈಲು ವ್ಯವಸ್ಥೆಗೊಳಿಸುವ ಚಿಂತನೆ ನನ್ನ ಮನದಲ್ಲಿದೆ. ಮುಂದಿನ ದಿನಗಳಲ್ಲಿ ಇದನ್ನು ಸ್ಪಷ್ಟಪಡಿಸಲಿದ್ದೇನೆ. ಒಟ್ಟಾರೆ ಮೈಸೂರು, ಬೆಂಗಳೂರಿಗೆ ಪರ್ಯಾಯ ನಗರವಾಗಿ ಅಭಿವೃದ್ಧಿಯಾಗಬೇಕು. ಆದರೆ ಮಾಲಿನ್ಯರಹಿತ ಅಭಿವೃದ್ಧಿಗೆ ಒತ್ತು ನೀಡುವುದು ನಮ್ಮ ಉದ್ದೇಶ ಎಂದು ನುಡಿದರು.

Translate »