ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚಾಮರಾಜ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮಾರ್ಚ್ 15ರಂದು ಕಾರ್ಯಕರ್ತರ ಪರಿವರ್ತನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11ಕ್ಕೆ ಪಕ್ಷದ ವರಿಷ್ಠರು ರ್ಯಾಲಿಗೆ ಚಾಲನೆ ನೀಡ ಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣು ಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್, ಉಪಮುಖ್ಯ ಮಂತ್ರಿ ಡಾ.ಜಿ. ಪರಮೇಶ್ವರ್, ಸಚಿವರಾದ ಡಿ.ಕೆ.ಶಿವ ಕುಮಾರ್, ಪುಟ್ಟರಂಗಶೆಟ್ಟಿ, ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಸೇರಿದಂತೆ ಮತ್ತಿತರರು ಪಾಲ್ಗೊಳ್ಳ ಲಿದ್ದಾರೆ ಎಂದು ಹೇಳಿದರು.
ರ್ಯಾಲಿಯಲ್ಲಿ 20 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯಕರ್ತರ ಪರಿವರ್ತನಾ ರ್ಯಾಲಿ ಏರ್ಪ ಡಿಸಲಾಗುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಡಾ.ಹೆಚ್.ಸಿ.ಮಹದೇವಪ್ಪ ಪಕ್ಷದ ಕೆಲ ಸಭೆಗಳಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗಿಲ್ಲ. ಆದರೆ ನಮ್ಮ ಅವರ ನಡುವೆ ಬಾಂಧವ್ಯ ಚೆನ್ನಾಗಿದೆ. ಅವರ ಮತ್ತು ಆರ್.ಧ್ರುವನಾರಾಯಣ್ ನಡುವಿನ ಒಡನಾಟವು ಉತ್ತಮವಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಹೆಚ್.ಸಿ.ಬಸವರಾಜು, ಮುಖಂಡರಾದ ಮಾದಪ್ಪ, ಮಂಜುನಾಥ್, ಮಾದಶೆಟ್ಟಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.




