ಮೈಸೂರು: ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ರಾಜ್ಯದ ಸಮ್ಮಿಶ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಸೋಮವಾರ ಬಿಜೆಪಿ ಕಾರ್ಯಕರ್ತರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ಗೃಹ ಸಚಿವ ಎಂ.ಬಿ.ಪಾಟೀಲ್ ರಾಜಕೀಯ ಎದುರಾಳಿಗಳ ವಿರುದ್ಧ ದಬ್ಬಾಳಿಕೆ, ದೌರ್ಜನ್ಯ ನಡೆಸುವ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಮಾತ ನಾಡುವ ಮಾಧ್ಯಮ ಸೇರಿದಂತೆ ಎದುರಾಳಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ವಿರುದ್ದ ಪ್ರಕರಣ ದಾಖಲಿಸುವ ಹುನ್ನಾರ ನಡೆಸಲಾಗುತ್ತದೆ. ಅನೇಕ ಪ್ರಕರಣಗಳಲ್ಲಿ ಬಿಜೆಪಿ ವಿರುದ್ಧ ಸೇಡಿನ ಕ್ರಮ ಅನುಸರಿಸುತ್ತಿದೆ. ಈ ಸಂಬಂಧ ಬಿಜೆಪಿ ವತಿಯಿಂದ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಅಸಮಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಸಚಿವ ಎಂ.ಶಿವಣ್ಣ ಮಾತನಾಡಿ, ಕಳೆದ ಮೂರ್ನಾಲ್ಕು ತಿಂಗಳಿಂದ ರಾಜ್ಯದ ಸಮ್ಮಿಶ್ರ ಸರ್ಕಾರದ ನಡೆ ದ್ವೇಷದಿಂದ ಕೂಡಿದೆ. ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನೇ ಗುರಿಯಾಗಿಸಿಕೊಂಡು ಸುಳ್ಳು ಪ್ರಕರಣ ದಾಖಲಿಸಿ ಬೆದರಿಸುವ ತಂತ್ರ ಗಾರಿಕೆ ನಡೆಸುತ್ತಿದೆ. ಸರ್ಕಾರದ ವಿರುದ್ಧ ಮಾತ ನಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗು ತ್ತಿದೆ. ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಿ ಎಂದು ಕರೆ ನೀಡಿ, ಪ್ರಚೋದನೆ ನೀಡಿದ್ದಾರೆ. ಈ ಸಂಬಂಧ ಅವರ ವಿರುದ್ಧ ದೂರು ದಾಖಲಿಸಿದ್ದರೂ, ಇದುವರೆಗೂ ಕ್ರಮ ಕೈಗೊಂಡಿಲ್ಲ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವಂತೆ ಕಾರ್ಯ ಕರ್ತರನ್ನು ಪ್ರಚೋದಿಸುವ ಹೇಳಿಕೆ ನೀಡಿದ್ದಾರೆ. ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ ಚಿತ್ರ ನಟರಾದ ದರ್ಶನ್ ಹಾಗೂ ಯಶ್‍ಗೆ ಬಹಿ ರಂಗವಾಗಿಯೇ ಬೆದರಿಕೆ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸರ್ಕಾರವನ್ನು ಟೀಕಿಸಿದರೆಂಬ ಕಾರಣದಿಂದ ಬಿಜೆಪಿ ಹಿತೈಷಿಗಳಾದ ಮಹೇಶ್ ವಿಕ್ರಮ್ ಹೆಗಡೆ, ಶೃತಿ ಬೆಳ್ಳಕ್ಕಿ, ಶಾರದಾ ಡೈಮಂಡ್, ಹೇಮಂತ್‍ಕುಮಾರ್, ಅಜಿತ್ ಶೆಟ್ಟಿ ಹೇರಂಜಿ ವಿರುದ್ಧ ಪ್ರಕರಣ ದಾಖಲಿಸಿ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ಸರ್ಕಾರದ ದುರಾಡಳಿತ ಪ್ರಶ್ನಿಸಿದವರನ್ನು ಜೈಲಿ ಗಟ್ಟುವ ಪರಂಪರೆಯನ್ನು ಸಮ್ಮಿಶ್ರ ಸರ್ಕಾರ ಅನುಸರಿಸುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹರಣ ಮಾಡಿದಂತಾಗಿದೆ. ಗೃಹ ಮಂತ್ರಿ ಎಂ.ಬಿ. ಪಾಟೀಲ್ ಜನರಿಗೆ ಭದ್ರತೆ ಒದಗಿಸದೆ ವಿರೋಧ ಪಕ್ಷದವರ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿರುವುದು ತಲೆ ತಗ್ಗಿಸುವ ಸಂಗತಿ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದ್ದು, ರಾಜ್ಯಪಾಲರು ಮಧ್ಯ ಪ್ರವೇಶಿಸಿ ಸರ್ಕಾರದ ದ್ವೇಷದ ನಡೆಗೆ ತಡೆಯೊಡ್ಡುವಂತೆ ಮನವಿ ಮಾಡಲಾಗಿದೆ ಎಂದರು.
ಪ್ರತಿಭಟನೆಯಲ್ಲಿ ಮಾಜಿ ಮೇಯರ್ ಸಂದೇಶ್ ಸ್ವಾಮಿ, ಮುಖಂಡರಾದ ಆರ್.ರಘು, ಬಿ.ಪಿ. ಮಂಜುನಾಥ್, ಸು.ಮುರಳಿ, ಜಗದೀಶ್, ಗಿರಿಧರ್, ಹೇಮಂತ್ ಕುಮಾರಗೌಡ, ಶರತ್, ಪಾಲಿಕೆ ಸದಸ್ಯ ರಾದ ಶಿವಕುಮಾರ್, ಪ್ರಮೀಳಾ, ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಅರುಣ್ ಕುಮಾರ್ ಗೌಡ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.