ಮೈಸೂರು, ಜೂ.26(ಪಿಎಂ)- ರೈತರು ಹಾಗೂ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಜು.2ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಳೇ ಮಿರ್ಲೆ ಸುನಯ್‍ಗೌಡ ತಿಳಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಅಂದು ಬೆಳಿಗ್ಗೆ 11ಕ್ಕೆ ಮೈಸೂರು ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗು ವುದು. ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದರು.
ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಪ್ರಾರಂಭಕ್ಕೆ ಕ್ರಮ ಕೈಗೊಳ್ಳಬೇಕು. 2019-20ನೇ ಸಾಲಿಗೆ ಪ್ರತಿ ಟನ್ ಕಬ್ಬಿಗೆ ಕನಿಷ್ಠ 3,800 ರೂ. ಬೆಲೆ ನಿಗದಿ ಮಾಡಬೇಕು. ಈ ಸಾಲಿನ ಭತ್ತಕ್ಕೆ ಕನಿಷ್ಠ 2,200 ರೂ. ಬೆಲೆ ನಿಗದಿಗೊಳಿಸಬೇಕು. ರಾಷ್ಟ್ರೀಕೃತ ಬ್ಯಾಂಕ್‍ಗಳಿಂದ ರೈತರಿಗೆ ಸಾಲ ಮರುಪಾವತಿಸುವಂತೆ ಕಿರುಕುಳ ನೀಡಲಾಗುತ್ತಿದ್ದು, ಇದನ್ನು ತಪ್ಪಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಸುವಂತೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು. ಸಂಘದ ಪದಾಧಿಕಾರಿಗಳಾದ ಎಂ.ಎಸ್.ರಾಜೇಂದ್ರ, ಜಗದೀಶ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.