ಕೊರೊನಾ; ವದಂತಿ ಹರಡುತ್ತಿರುವ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಲು ಡಿಸಿ ಸೂಚನೆ
ಮೈಸೂರು

ಕೊರೊನಾ; ವದಂತಿ ಹರಡುತ್ತಿರುವ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಲು ಡಿಸಿ ಸೂಚನೆ

March 16, 2020

ಮೈಸೂರು, ಮಾ.15(ಎಂಟಿವೈ)-ತಿ.ನರಸೀಪುರ ಪಟ್ಟಣದಲ್ಲಿ ಕೊರೊನಾ ಸೋಂಕು ತಗುಲಿದ ವ್ಯಕ್ತಿ ಪತ್ತೆಯಾಗಿದ್ದಾನೆ ಎಂದು ಯುವಕನೊಬ್ಬನ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಭಯ ಮೂಡಿಸುತ್ತಿರುವ ಕಿಡಿಗೇಡಿ ವಿರುದ್ಧ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ವದಂತಿ: `ತಿ.ನರಸೀಪುರ ಮೂಲದ ಯುವಕನೊಬ್ಬನಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಯುವಕ ಪಟ್ಟಣದಲ್ಲಿ ಸಂಚರಿಸುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು’ ಎಂದು ಯುವಕನೊಬ್ಬನ ಭಾವಚಿತ್ರ ಸಹಿತದ ವಿಡಿಯೊ ವನ್ನು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ವಾಟ್ಸಪ್ ಮತ್ತು ಫೇಸ್‍ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೊ ವೈರಲ್ ಆಗಿದ್ದು, ತಿ.ನರಸೀಪುರದ ಜನರನ್ನು ಆತಂಕಕ್ಕೀಡು ಮಾಡಿದೆ. ಇದನ್ನು ಗಂಭೀರ ವಾಗಿ ಪರಿಗಣಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್. ವೆಂಕಟೇಶ್, ವದಂತಿ ಹರಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಎಸ್‍ಪಿ ಸಿ.ಬಿ.ರಿಷ್ಯಂತ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಇದೇ ವಿಚಾರವಾಗಿ ಡಿಸಿ ಅವರಿಂದಲೂ ಭಾನುವಾರ ಸಂಜೆ ಸೂಚನೆ ಹೊರಬಿದ್ದಿದೆ.

Translate »