ಚಾಮರಾಜನಗರ: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ನಗರದಲ್ಲಿ ಬುಧವಾರ ಶ್ರೀ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
ಪ್ರವಾಸಿ ಮಂದಿರದಿಂದ ಆರಂಭವಾದ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ನಂತರ ಮೆರವಣಿಗೆಯು ಗುಂಡ್ಲುಪೇಟೆ ವೃತ್ತ, ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ, ಭುವನೇಶ್ವರಿ ವೃತ್ತದ ಮೂಲಕ ಕಾರ್ಯಕ್ರಮ ಆಯೋಜಿಸಿದ್ದ ಪೇಟೆ ಪ್ರೈಮರಿ ಶಾಲೆ ಆವರಣದಲ್ಲಿ ಮುಕ್ತಾಯಗೊಂಡಿತು.
ಗಾಡಿಗೊಂಬೆ, ಡೊಳ್ಳುಕುಣಿತ, ವೀರಗಾಸೆ, ಗೊರವರಕುಣಿತ, ಗಿರಿಜನರ ಗೊರವರ ಕುಣಿತ, ವಿವಿಧ ವೇಷಧಾರಿಗಳು, ಮಂಗಳವಾದ್ಯ, ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಗಮನ ಸೆಳೆದವು. ತಮ್ಮಡಹಳ್ಳಿ ಗ್ರಾಮದ ಮಹದೇವನಾಯ್ಕ, ವಾಲ್ಮೀಕಿ ವೇಷ ಧರಿಸಿದ್ದು ಸಾರ್ವಜನಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು.