ಮೈಸೂರು, ಜೂ.22(ಆರ್‍ಕೆಬಿ)- ಅತಿಥಿ ಉಪನ್ಯಾಸಕರು ಮತ್ತು ಶಿಕ್ಷಕರ ವೇತನ ಬಿಕ್ಕಟ್ಟನ್ನು ತಕ್ಷಣ ಪರಿಹರಿಸಬೇಕು ಎಂದು ಆಗ್ರಹಿಸಿ ಎಐಡಿವೈಓ ಸಂಘಟನೆಯಿಂದ ಜೂ.25ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಧಿಕಾರಿ ಕಚೇರಿ, ತಾಲೂಕು ಕಚೇರಿಗಳ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎಐಡಿವೈಓ ಕಾರ್ಯದರ್ಶಿ ಟಿ.ಆರ್. ಸುನಿಲ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ವಿದ್ಯಾರ್ಥಿಗಳಿಗೆ ಬೋಧಿಸುವ ಶಿಕ್ಷಕರು, ಉಪನ್ಯಾಸಕರನ್ನು ಇಂತಹ ಅಸಹಾಯಕ ಪರಿಸ್ಥಿತಿಗೆ ಸರ್ಕಾರ ದೂಡಿದೆ. ಕೂಡಲೇ ರಾಜ್ಯ ಸರ್ಕಾರ ವಿಶೇಷ ಅನುದಾನ ಘೋಷಿಸಬೇಕು. ಬಾಕಿ ಇರುವ ಹಣವನ್ನು ಒಂದೇ ಬಾರಿಗೆ ಪಾವತಿಸಲು ಕ್ರಮ ಕೈಗೊಳ್ಳಬೇಕು. ಖಾಲಿ ಇರುವ ಹುದ್ದೆಗಳಿಗೆ ಶಿಕ್ಷಕರು ಮತ್ತು ಉಪನ್ಯಾಸಕರನ್ನು ನೇಮಿಸುವ ಪ್ರಕ್ರಿಯೆ ಕೂಡಲೇ ನಡೆಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ತಿಳಿಸಿದರು. ಸುದ್ದಿ ಗೋಷ್ಠಿಯಲ್ಲಿ ಸಮಿತಿಯ ಜಿಲ್ಲಾಧ್ಯಕ್ಷ ಹೆಚ್.ಎಸ್.ಹರೀಶ್, ಕಲಾವತಿ ಇದ್ದರು.