ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ಮೈಸೂರು

ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

December 15, 2021

ಮೈಸೂರು,ಡಿ.14(ಪಿಎಂ)-ವಿದ್ಯಾರ್ಥಿ ಸಮುದಾಯದ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಅಖಿಲ ಭಾರ ತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮೈಸೂರು ಶಾಖೆ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ವಿವೇಕಾನಂದ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕೋವಿಡ್ 2ನೇ ಅಲೆ ಬಳಿಕ ರಾಜ್ಯ ಹಂತಹಂತವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ತರಗತಿಗಳು ಭೌತಿಕವಾಗಿ ಆರಂಭ ವಾಗಿದ್ದರೂ ವಿದ್ಯಾರ್ಥಿಗಳು ಸಾರಿಗೆ, ವಸತಿ ನಿಲಯ ಸೌಲಭ್ಯದ ಕೊರತೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ಗ್ರಾಮ ಗಳಿಗೂ ಬಸ್ ಸೌಲಭ್ಯ ಕಲ್ಪಿಸಬೇಕು. ಲಾಕ್‍ಡೌನ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಸಾರಿಗೆ ಸೇವೆ ಕೆಲ ಹಳ್ಳಿಗಳಲ್ಲಿ ಇನ್ನೂ ಆರಂಭವಾಗಿಲ್ಲ. ಇದರಿಂದ ರಾಜ್ಯದ ಗ್ರಾಮೀಣ ಭಾಗದ ಲಕ್ಷಾಂತರ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಕೂಡಲೇ ವಿದ್ಯಾರ್ಥಿಗಳ ಅಗತ್ಯಕ್ಕೆ ಅನುಗುಣವಾಗಿ ಬಸ್ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಡಿಪ್ಲೊಮಾ, ಇಂಜಿನಿಯರಿಂಗ್, ಸ್ನಾತಕ-ಸ್ನಾತಕೋ ತ್ತರ ಮತ್ತು ಪಿ.ಹೆಚ್‍ಡಿ ಮಾಡುತ್ತಿರುವ ಪ.ಜಾತಿ-ಪ.ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದ ಶಿಷ್ಯವೇತನ ಪಡೆಯ ಲಾಗದೇ ಪರದಾಡುವಂತಾಗಿದೆ. ರಾಜ್ಯ ಸರ್ಕಾರ ಈ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ವಿದ್ಯಾಸಿರಿ ಶಿಷ್ಯವೇತನ ಸೇರಿದಂತೆ ಎಲ್ಲಾ ವಿದ್ಯಾರ್ಥಿ ವೇತನವನ್ನು ತಕ್ಷಣ ಬಿಡುಗಡೆ ಮಾಡಬೇಕು ಮತ್ತು ವಿದ್ಯಾರ್ಥಿ ವೇತನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿ ಗಳು ಹಾಸ್ಟೆಲ್‍ಗಳನ್ನೇ ಅವಲಂಬಿಸಿದ್ದಾರೆ. ಹೊಸದಾಗಿ ಶಾಲಾ-ಕಾಲೇಜಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ತರ ಗತಿಗಳು ಆರಂಭವಾಗಿದ್ದರೂ ವಸತಿ ನಿಲಯಗಳಿಗೆ ಆಯ್ಕೆ ಪ್ರಕ್ರಿಯೆ ಮುಗಿಯದೇ ದಿನನಿತ್ಯ ವಿದ್ಯಾರ್ಥಿಗಳು ಪರದಾಡು ವಂತಾಗಿದೆ. ಕೂಡಲೇ ವಸತಿ ನಿಲಯಗಳಿಗೆ ಆಯ್ಕೆ ಪ್ರಕ್ರಿಯೆ ನಡೆಸಲು ಕ್ರಮ ವಹಿಸಬೇಕು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್‍ಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಜೊತೆಗೆ ಹಾಸ್ಟೆಲ್‍ಗಳಲ್ಲಿ ಎಲ್ಲಾ ಮೂಲಭೂತ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಶ್ರೀರಾಮ್, ಜಿಲ್ಲಾ ಸಂಚಾಲಕ ಮಲ್ಲಪ್ಪ, ನಗರ ಕಾರ್ಯದರ್ಶಿ ಶಿವು, ಸಹ ಕಾರ್ಯದರ್ಶಿ ಗಳಾದ ಸುಹಾಸ್, ನಮೃತಾ ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »