ಚಾಮರಾಜನಗರ: ಚಾಮರಾಜನಗರ ನಗರಸಭಾ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿರುವವರು ಕೂಡಲೇ ಮಾರಾಟ ವಹಿವಾಟು ನಿಲ್ಲಿಸಬೇಕು. ಇಲ್ಲವಾದಲ್ಲಿ ಉದ್ದಿಮೆ ಪರವಾನಗಿಯನ್ನು ರದ್ದುಪಡಿಸಿ ಕ್ರಮ ವಹಿಸಲಾಗುವುದೆಂದು ನಗರಸಭೆ ಎಚ್ಚರಿಕೆ ನೀಡಿದೆ.
ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗುಗಳು ದೈನಂದಿನ ಬಳಕೆಯಲ್ಲಿರುವ ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಪರಿಸರ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಉಂಟಾಗುತ್ತಿದೆ. ಪ್ಲಾಸ್ಟಿಕ್ ತ್ಯಾಜ್ಯಗಳು ಚರಂಡಿಗಳ ಸರಾಗ ಹರಿವಿಗೆ ತಡೆ ಉಂಟುಮಾಡಿದೆ.
ಪರಿಸರ ಸಂರಕ್ಷಣಾ ಕಾಯಿದೆ 1986ರ ಸೆಕ್ಷನ್ 5ರ ಅನ್ವಯ ಯಾವುದೇ ಅಂಗಡಿ ಮಾರಾಟಗಾರರು ಪ್ಲಾಸ್ಟಿಕ್‍ನಿಂದ ತಯಾರಿಸಿದ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಫ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ತಟ್ಟೆ, ಲೋಟ, ಚಮಚ, ಕ್ಲಿಂಗ್ ಫಿಲ್ಕ್ಸ್, ಊಟದ ಮೇಜಿನ ಮೇಲಿನ ಹಾಳೆ, ಥರ್ಮಾಕೋಲ್, ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್‍ನಿಂದ ತಯಾರಾದ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ.ನಗರಸಭಾ ವ್ಯಾಪ್ತಿಯಲ್ಲಿ ಕೂಡ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡದಂತೆ ಈ ಹಿಂದೆಯೂ ತಿಳಿಸಲಾಗಿದೆ. ಗ್ರಾಹಕರಿಗೆ ಬಟ್ಟೆ ಚೀಲ ನೀಡಲು ಸೂಚಿಸ ಲಾಗಿದೆ. ಆದರೂ ಸಹ ಪ್ಲಾಸ್ಟಿಕ್ ಬಳಕೆ ಪ್ರಮಾಣ ಕಡಿಮೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ನಗರಸಭೆ ಅಧಿಕಾರಿಗಳು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಿಬ್ಬಂದಿಯೊಂದಿಗೆ ನಗರಸಭೆ ವ್ಯಾಪ್ತಿಯಲ್ಲಿರುವ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಪ್ಲಾಸ್ಟಿಕ್ ಬಳಕೆ ಮಾರಾಟ ಮಾಡುತ್ತಿರು ವುದು ಕಂಡುಬಂದಲ್ಲಿ ಉದ್ದಿಮೆ ಪರವಾನಗಿ ರದ್ದು ಪಡಿಸಿ ಕರ್ನಾಟಕ ಮುನಿಷಿಪಲ್ ಕಾಯಿದೆ 1964ರ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಪೌರಾಯುಕ್ತ ರಾಜಣ್ಣ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.