ಕೇಂದ್ರ ಸರ್ಕಾರದ ವಿರುದ್ಧ ಮೈಸೂರಲ್ಲಿ ಕಾರ್ಯಕರ್ತರ ಪ್ರತಿಭಟನೆ
ಮೈಸೂರು

ಕೇಂದ್ರ ಸರ್ಕಾರದ ವಿರುದ್ಧ ಮೈಸೂರಲ್ಲಿ ಕಾರ್ಯಕರ್ತರ ಪ್ರತಿಭಟನೆ

November 14, 2019

ಮೈಸೂರು,ನ.13(ಆರ್‍ಕೆ)- ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಮೈಸೂರಲ್ಲಿ ಪ್ರತಿಭಟನಾ ಧರಣಿ ನಡೆಸಿದರು. ನಗರ ಕಾಂಗ್ರೆಸ್ ಅಧ್ಯಕ್ಷ ಆರ್. ಮೂರ್ತಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿಜೆ.ವಿಜಯ ಕುಮಾರ್ ಅವರ ನೇತೃತ್ವದಲ್ಲಿ ಮೈಸೂರಿನ ಗಾಂಧಿ ಸ್ಕ್ವೇರ್‍ನಲ್ಲಿ ನಡೆದ ಧರಣಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವರೂ ಆದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಆರ್ಥಿಕ ನೀತಿಯಿಂದಾಗಿ ದೇಶದಾದ್ಯಂತ ಹಣಕಾಸಿನ ವ್ಯವಸ್ಥೆ ಕುಸಿಯುತ್ತಿದ್ದು, ಬೆಂಗಳೂರು ಸೇರಿ ಹಲವು ಪ್ರಮುಖ ನಗರಗಳಲ್ಲಿ ಬೃಹತ್ ಉದ್ದಿಮೆಗಳು ನಷ್ಟ ಅನುಭವಿ ಸುತ್ತಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕಂಪನಿಗಳು ಬಂದ್ ಆಗುತ್ತಿರುವುದರಿಂದ ಲಕ್ಷಾಂತರ ಮಂದಿ ಕೆಲಸ ಕಳೆದುಕೊಂಡು ಬೀದಿಪಾಲಾಗಿದ್ದಾರೆ. ದೇಶ ಆರ್ಥಿಕ ಪರಿಸ್ಥಿತಿ ದಿವಾಳಿಯತ್ತ ಸಾಗಿದೆ. ಕೇಂದ್ರದ ಜನ ವಿರೋಧಿ ನೀತಿಯೇ ಸಂಕಷ್ಟಕ್ಕೆ ಕಾರಣ. ಭಾವನಾತ್ಮಕ ವಿಚಾರಗಳನ್ನು ಹೇಳಿಕೊಂಡು ಅಧಿಕಾರಕ್ಕೆ ಬಂದ ಬಿಜೆಪಿ, ಒಂದೂ ಭರವಸೆ ಈಡೇರಿಸದೆ ಜನರಿಗೆ ವಂಚಿಸುತ್ತಿದೆ ಎಂದು ಟೀಕಿಸಿದರು. ದೇಶ, ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿರುವ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಯಡಿಯೂರಪ್ಪ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನ ಗಳಿಗೆ ರಾಜೀನಾಮೆ ನೀಡಬೇಕೆಂದು ಧರಣಿ ನಿರತರು ಆಗ್ರಹಿಸಿದರು.

ಮಾಜಿ ಶಾಸಕ ವಾಸು, ನಗರ ಕಾಂಗ್ರೆಸ್ ಅಧ್ಯಕ್ಷ ಆರ್. ಮೂರ್ತಿ ಹಾಗೂ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಮಾತನಾಡಿ, ಅವೈಜ್ಞಾನಿಕ ನೀತಿಗಳಿಂದಾಗಿ ಜಿಡಿಪಿ ಶೇ. 6ರಷ್ಟು ಕುಸಿದಿದೆ. ಡಾಲರ್ ಎದುರು ರೂಪಾಯಿ ಮೌಲ್ಯ 72 ರೂ. ಗಡಿ ದಾಟಿದೆ. ಆಟೋಮೊಬೈಲ್, ಜವಳಿ, ಸಿಮೆಂಟ್, ಕಬ್ಬಿಣ, ಸಣ್ಣ ಕೈಗಾರಿಕೆಗಳು ಮುಚ್ಚುವ ಹಂತ ತಲುಪಿವೆ ಎಂದರು.

ಮಾಜಿ ಮೇಯರ್‍ಗಳಾದ ಬಿ.ಕೆ.ಪ್ರಕಾಶ್, ಪುಷ್ಪಲತಾ ಚಿಕ್ಕಣ್ಣ, ಮೋದಾಮಣಿ, ಟಿ.ಬಿ.ಚಿಕ್ಕಣ್ಣ, ಮಾಜಿ ಉಪಮೇಯರ್ ಪುಷ್ಪವಲ್ಲಿ, ಮುಖಂಡರಾದ ಶಿವಮಾದು, ಶಿವಮಲ್ಲು, ಭಾಸ್ಕರ್ ಎಲ್.ಗೌಡ, ಈಶ್ವರ್ ಚಕ್ಕಡಿ, ಹೆಚ್.ಎ.ವೆಂಕಟೇಶ್, ಪ್ರಶಾಂತ್ ಗೌಡ, ಚಂದ್ರು, ಅತಿಕ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಧರಣಿಯಲ್ಲಿ ಭಾಗವಹಿಸಿದ್ದರು.

Translate »