ಮೊದಲ ಹಂತ ಮುಕ್ತಾಯದ ನಂತರ ಎರಡನೇ ಹಂತದ ಚುನಾವಣಾ ಕ್ಷೇತ್ರಗಳಲ್ಲಿ ನಾಯಕರ ಪ್ರಚಾರ ಅಬ್ಬರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ನಡೆಯುತ್ತಿರುವ 14 ಲೋಕಸಭಾ ಕ್ಷೇತ್ರಗಳಿಗೆ ಭಾನುವಾರ ಸಂಜೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದ್ದು, ಇದಕ್ಕೂ ಮುನ್ನವೇ ಮತದಾರರನ್ನು ಓಲೈಸಿ ಕೊಳ್ಳಲು ಮೈತ್ರಿ ಪಕ್ಷ ಹಾಗೂ ಬಿಜೆಪಿ ನಾಯಕರು ಬಿಸಿಲು ನಾಡಿನತ್ತ ತೆರಳಿದ್ದಾರೆ.

ಮೊದಲ ಹಂತದ ಚುನಾ ವಣೆ ಮುಗಿಯುತ್ತಿದ್ದಂತೆ ವಿಶ್ರಾಂತಿಗೂ ಅವಕಾಶ ನೀಡದೇ ತಮ್ಮ ಬಲ ಹೆಚ್ಚಿಸಿಕೊಳ್ಳಲು ಕಾಂಗ್ರೆಸ್-ಜೆಡಿಎಸ್ ಹಾಗೂ ಬಿಜೆಪಿ ನಾಯಕರು ದಾವಣಗೆರೆ, ಶಿವಮೊಗ್ಗ, ಉತ್ತರ ಕನ್ನಡ, ಬಳ್ಳಾರಿ, ವಿಜಯಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ, ಹಾವೇರಿ, ಧಾರ ವಾಡ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಲೋಕಸಭಾ ಕ್ಷೇತ್ರಗಳಲ್ಲಿ ಮತದಾರರ ಮನವೊಲಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು, ಬಾಗಲಕೋಟೆ, ಚಿಕ್ಕೋಡಿಗೆ ನಿನ್ನೆ ಪಕ್ಷದ ಕಾರ್ಯಕರ್ತರನ್ನುಉದ್ದೇಶಿಸಿ ಭಾಷಣ ಮಾಡಿದರೆ, ಇಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಚಿಕ್ಕೋಡಿ ಮತ್ತು ರಾಯಚೂರಿನಲ್ಲಿ ಮತದಾರರ ಮನವೊಲಿಸುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್‍ನ ಪಾಲುದಾರ ಪಕ್ಷ ಜೆಡಿಎಸ್ ರಾಷ್ಟ್ರೀಯ ನಾಯಕ ಹೆಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಬೆಳಗಾವಿ ಚಿಕ್ಕೋಡಿಯಲ್ಲಿ ಪ್ರಚಾರ ನಡೆಸಿದ್ದಾರೆ.

ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಆಹ್ವಾನದ ಮೇರೆಗೆ ದೇವೇಗೌಡರು ಒಂದು ದಿನದ ಮಟ್ಟಿಗೆ ಗುಲ್ಬರ್ಗಾ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಮಂಡ್ಯ ಕ್ಷೇತ್ರದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ತಮ್ಮ ಕ್ಷೇತ್ರದಲ್ಲಿ ಕಳೆದ ಒಂದೂವರೆ ತಿಂಗಳಿಂದ ಪ್ರಚಾರ ನಡೆಸಿ ದಣಿದಿದ್ದರೂ ವಿಶ್ರಾಂತಿ ಪಡೆಯದೇ ಶಿವಮೊಗ್ಗ ಸೇರಿದಂತೆ ಕೆಲ ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದಾರೆ. ಸಚಿವ ಡಿ.ಕೆ. ಶಿವಕುಮಾರ್ ಶಿವಮೊಗ್ಗದಲ್ಲಿ ಮೈತ್ರಿ ಅಭ್ಯರ್ಥಿ ಪರ ಮತ ಪ್ರಚಾರ ನಡೆಸುತ್ತಿದ್ದರೆ, ಮಾಜಿ ಸಿಎಂ ಸಿದ್ದರಾಮಯ್ಯ ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಪರ ಮತಯಾಚಿಸುತ್ತಿದ್ದಾರೆ.