ದೇವೇಗೌಡರ ಭೇಟಿಯಾದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು: ಪ್ರಜಾಪ್ರಭುತ್ವದ ಉಳಿವಿಗಾಗಿ ಪ್ರತಿಪಕ್ಷಗಳಿಂದ ಒಗ್ಗಟ್ಟಿನ ಹೋರಾಟ
ಮೈಸೂರು

ದೇವೇಗೌಡರ ಭೇಟಿಯಾದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು: ಪ್ರಜಾಪ್ರಭುತ್ವದ ಉಳಿವಿಗಾಗಿ ಪ್ರತಿಪಕ್ಷಗಳಿಂದ ಒಗ್ಗಟ್ಟಿನ ಹೋರಾಟ

November 9, 2018

ಬೆಂಗಳೂರು: ದೇಶದ ಪ್ರಜಾ ಪ್ರಭುತ್ವ, ಸಂವಿಧಾನ ರಕ್ಷಿಸುವ ನಿಟ್ಟಿನಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಒಗ್ಗಟ್ಟಿನಿಂದ ಹೋರಾಟ ನಡೆಸಲಿವೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ತೃತೀಯ ರಂಗದ ಮುಂದಿನ ಕಾರ್ಯತಂತ್ರ ಕುರಿತಂತೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಉಳಿವಿಗಾಗಿ ನಾವೆಲ್ಲ ಒಂದಾಗಿದ್ದೇವೆ. ಎನ್‍ಡಿಎ ಸರ್ಕಾರವನ್ನು ಕಿತ್ತೊಗೆಯಬೇಕು. ಇದಕ್ಕೆ ಕಾಂಗ್ರೆಸ್ ನಾಯಕರು ಸಹಕರಿಸಬೇಕು. ಇದರಲ್ಲಿ ಹೆಚ್ಚಿನ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಮೇಲಿದೆ ಎಂದು ಹೇಳಿದರು. ಕೇಂದ್ರ ಸರ್ಕಾರ ಜಾರಿಗೆ ತಂದ ನೋಟ್ ಬ್ಯಾನ್, ಹಾಗೂ ಜೆಎಸ್ ಟಿಯಿಂದಾಗಿ ಜನರು ಸಾಕಷ್ಟು ತೊಂದರೆ ಅನುಭವಿ ಸಿದ್ದಾರೆ. ದಲಿತರು, ಮಹಿಳೆಯರು, ಯುವಕರ ಕಲ್ಯಾಣಕ್ಕಾಗಿ ನರೇಂದ್ರ ಮೋದಿ ಏನನ್ನೂ ಮಾಡಿಲ್ಲ. ಈ ನಿಟ್ಟಿನಲ್ಲಿ ಮುಂದಿನ ಲೋಕಸಭೆ ಚುನಾವಣೆ ಕುರಿತು ಒಗ್ಗಟ್ಟಿನಿಂದ ಹೋರಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದೇವೆ ಎಂದರು. ವಿರೋಧಪಕ್ಷ ಗಳನ್ನು ಮಟ್ಟಹಾಕಲು ಐಟಿ, ಇ.ಡಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಕಳೆದ ನಾಲ್ಕುವರೆ ವರ್ಷಗಳಲ್ಲಿ ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ರಫೇಲ್ ಒಪ್ಪಂದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಏನನ್ನೂ ಹೇಳುತ್ತಿಲ್ಲ. ದೇಶದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಸಿಬಿಐ ಸ್ವಾಯತ್ತತೆಯನ್ನು ಕಿತ್ತುಕೊಳ್ಳಲಾಗಿದೆ ಎಂದು ಆರೋಪಿಸಿದರು.

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೇತರ ಸರ್ಕಾರ ರಚಿಸುವುದೇ ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ಅನುಸರಿಸಬಹುದಾದ ಕಾರ್ಯತಂತ್ರ ಕುರಿತಂತೆ ಚರ್ಚೆ ನಡೆಸಲಾಯಿತು ಎಂದು ಎಚ್. ಡಿ. ದೇವೇಗೌಡರು ಹೇಳಿದರು. ಚಂದ್ರಬಾಬು ನಾಯ್ಡು ಬಂದ ಮೇಲೆ 1996 ರ ಕ್ರಾಂತಿ ಪುನರಾವರ್ತನೆ ಆಗಲಿದೆ. 2019ರ ಲೋಕಸಭಾ ಚುನಾವಣೆಯಲ್ಲೂ ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

Translate »