ಮೈಸೂರು, ಜೂ.15- ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಅವರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಬೇಕೆಂದು ಮೈಸೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಪಕ್ಷದ ನಿಕಟಪೂರ್ವ ಜಿಲ್ಲಾಧ್ಯಕ್ಷರಾಗಿ ಮೂರೂವರೆ ವರ್ಷಗಳ ಕಾಲ ಸಮರ್ಥವಾಗಿ ಪಕ್ಷದ ಸಂಘಟನೆಯನ್ನು ಮಾಡಿರುವ ಶಿವಣ್ಣ, ಮೈಸೂರು ಮಾತ್ರವಲ್ಲದೆ ಚಾಮರಾಜನಗರ, ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲೂ ಚಿರಪರಿಚಿತ ರಾಗಿರುವ ಸಜ್ಜನ ವ್ಯಕ್ತಿಯಾಗಿದ್ದಾರೆ ಎಂದು ಮನವಿಯಲ್ಲಿ ತಿಳಿಸ ಲಾಗಿದೆ. ಕಳೆದ 40 ವರ್ಷಗಳಿಂದ ಜನಸೇವೆಯಲ್ಲಿ ತೊಡಗಿರುವ ಶಿವಣ್ಣ, ಎಸ್.ಎಂ.ಕೃಷ್ಣ ಸಚಿವ ಸಂಪುಟದಲ್ಲಿ ಕನ್ನಡ ಮತ್ತು ಸಂಸ್ಕøತಿ, ಹಣಕಾಸು ರಾಜ್ಯ ಸಚಿವ, ವಾರ್ತಾ ಮತ್ತು ಪ್ರಚಾರ ಇಲಾಖೆ ಅಲ್ಲದೆ, ಕ್ಯಾಬಿನೆಟ್ ದರ್ಜೆಯಲ್ಲಿ ತೋಟಗಾರಿಕೆ, ನೀರಾವರಿ (ಕಾವೇರಿ ಕಣಿವೆ) ಸಚಿವರಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸಿರುವ ಅನುಭವ ಹೊಂದಿದ್ದಾರೆ. 1985ರಿಂದ 2004ರವರೆಗೆ ಸತತವಾಗಿ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿ ಸುತ್ತಿದ್ದ ಅವರು ಹೆಚ್.ಡಿ.ಕೋಟೆ ಕ್ಷೇತ್ರ ಪರಿಶಿಷ್ಟ ಪಂಗಡ ಮೀಸಲಾದ ಕಾರಣ ಅಲ್ಲಿ ಸ್ಪರ್ಧಿಸಲು ಅವಕಾಶವಾಗಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ಅಥವಾ ತಿ.ನರಸೀಪುರ ಕ್ಷೇತ್ರ, ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಇವರು, ಬೇರೆಯವರಿಗೆ ಟಿಕೆಟ್ ದೊರೆತಿದ್ದರೂ ಪಕ್ಷದ ಅಭ್ಯರ್ಥಿಗಳ ಪರ ಶ್ರಮ ವಹಿಸಿದ್ದರು. ವಿಧಾನಪರಿಷತ್‍ನಲ್ಲಿ ಬಿಜೆಪಿ ಪಕ್ಷದಿಂದ ಪರಿಶಿಷ್ಟ ಜಾತಿಗೆ ಸೇರಿದ ಸದಸ್ಯರೂ ಇಲ್ಲ. ಶಿವಣ್ಣ ಅವರ ಸ್ಪರ್ಧೆಗೆ ಅವಕಾಶ ನೀಡಿದರೆ ಪರಿಶಿಷ್ಟ ಜಾತಿಗೆ ಪ್ರಾತಿನಿಧ್ಯ ನೀಡಿದಂತಾಗುತ್ತದೆ. ಆದ್ದರಿಂದ ಅವರಿಗೆ ಟಿಕೆಟ್ ನೀಡಬೇಕೆಂದು ಮನವಿ ಮಾಡಲಾಗಿದೆ.
