ಅರಸೀಕೆರೆ: ಭಾರತ್ ಬಂದ್‍ಗೆ ನೀರಸ ಪ್ರತಿಕ್ರಿಯೆ
ಹಾಸನ

ಅರಸೀಕೆರೆ: ಭಾರತ್ ಬಂದ್‍ಗೆ ನೀರಸ ಪ್ರತಿಕ್ರಿಯೆ

January 9, 2019

ಅರಸೀಕೆರೆ: ಕೇಂದ್ರ ಸರ್ಕಾರದ ವಿರುದ್ಧ ಕರೆಯಲಾಗಿದ್ದ ಭಾರತ್ ಬಂದ್ ನಗರದಲ್ಲಿ ಸಂಪೂರ್ಣ ವಿಫಲವಾಗಿದೆ. ಆದರೆ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು.

ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಆರಂಭಿಸಿದ ವಿವಿಧ ಸಂಘಟನೆಯ ಕಾರ್ಯ ಕರ್ತರು ಹಾಗೂ ಪದಾಧಿಕಾರಿಗಳು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಳಿಕ ತಾಲೂಕು ಕಚೇರಿಯಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ನಗರದಲ್ಲಿ ಭಾರತ್ ಬಂದ್ ಕೇವಲ ಪ್ರತಿಭಟನೆಗೆ ಮಾತ್ರ ಸೀಮಿತವಾಗಿದ್ದು, ಸಾರ್ವಜನಿಕ ಜನಜೀವನ ಎಂದಿನಂತೆ ಸಹಜ ಸ್ಥಿತಿಯಲ್ಲಿತ್ತು. ಈ ಮೂಲಕ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಬಂದ್‍ಗೆ ಕೆಎಸ್‍ಆರ್‍ಟಿಸಿ ಚಾಲಕರು ಮತ್ತು ನಿರ್ವಾಹಕರು ಬೆಂಬಲ ಸೂಚಿಸಿದ್ದರಿಂದ ಬಸ್‍ಗಳು ರಸ್ತೆಗಿಳಿಯಲಿಲ್ಲ. ಪರಿಣಾಮ ಬಸ್ ನಿಲ್ದಾಣ ಬಿಕೋ ಎನ್ನುತ್ತಿತ್ತು. ಇದರಿಂದ ದೂರದೂರಿಗೆ ತೆರಳುವ ಪ್ರಯಾಣಿಕರು ಪರದಾಡುತ್ತಿದ್ದರು. ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಮಾಡಲಾಗಿತ್ತು.
ಸಹಜ ಸ್ಥಿತಿಯಲ್ಲಿ ಜನಜೀವನ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳಿಂದ ಮಂಗಳವಾರ ಕರೆ ನೀಡಿದ್ದ ಭಾರತ್ ಬಂದ್‍ನ ಪರಿಣಾಮ ನಗರದ ಜನಜೀವನದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಿಲ್ಲ. ಎಂದಿನಂತೆ ಶಾಲಾ-ಕಾಲೇಜುಗಳು, ಹೋಟೆಲ್, ಚಿತ್ರಮಂದಿರ, ಪೆಟ್ರೋಲ್ ಬಂಕ್ ಹಾಗೂ ಬ್ಯಾಂಕ್‍ಗಳು ಕಾರ್ಯನಿರ್ವಹಿಸಿದವು. ಬಸ್ ಸಂಚಾರ ಇಲ್ಲದಿದ್ದರಿಂದ ಗ್ರಾಮೀಣ ಪ್ರದೇಶದ ಜನಸಂಖ್ಯೆ ನಗರದಲ್ಲಿ ವಿರಳವಾಗಿತ್ತು.

ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಅಂಗನವಾಡಿ ನೌಕರರ ಸಂಘ, ದಾಸೋಹ ನೌಕರರ ಸಂಘ, ಆಟೋ ಚಾಲಕರ ಸಂಘ, ರೈತ ಚಳುವಳಿಯ ಕಾರ್ಯಕರ್ತರು, ಅಕ್ಷರ ದಾಸೋಹ ನೌಕರರ ಸಂಘ, ವಾಹನ ಚಾಲಕರು, ಕಾರ್ಮಿಕರು, ಕೂಲಿ ಕಾರ್ಮಿಕರು, ಬೀದಿ ವ್ಯಾಪಾರಿಗಳು ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆಯ ನೇತೃತ್ವ ವಹಿಸಿದ್ದವು.

Translate »