ಚುನಾವಣೆ ವೇಳೆ ಭರವಸೆಯಂತೆ 370ನೇ ವಿಧಿ ರದ್ದುಪಡಿಸಿದ್ದಾಯಿತು, ಇನ್ನು ರಾಮಮಂದಿರವನ್ನೂ ನಿರ್ಮಿಸುತ್ತೇವೆ: ಕಟೀಲ್
ಮೈಸೂರು

ಚುನಾವಣೆ ವೇಳೆ ಭರವಸೆಯಂತೆ 370ನೇ ವಿಧಿ ರದ್ದುಪಡಿಸಿದ್ದಾಯಿತು, ಇನ್ನು ರಾಮಮಂದಿರವನ್ನೂ ನಿರ್ಮಿಸುತ್ತೇವೆ: ಕಟೀಲ್

August 29, 2019

ಮೈಸೂರು, ಆ.28(ಎಸ್‍ಪಿಎನ್)- ಮುಂಬರುವ ವಿಧಾನಸಭಾ ಚುನಾ ವಣೆಯಲ್ಲಿ 150 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕಿದೆ. ಅದಕ್ಕಾಗಿ ಈಗಿನಿಂದಲೇ ಕಾರ್ಯಕರ್ತರು ತಳ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಬೇಕು ಎಂದು ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾರ್ಯಕರ್ತರಿಗೆ ಕರೆ ನೀಡಿದರು.

ನಿನ್ನೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಳಿನ್ ಕುಮಾರ್, ಇಂದು ಮೈಸೂರಿಗೆ ಭೇಟಿ ನೀಡಿದರು. ಈ ವೇಳೆ ಪಕ್ಷದ ಕಚೇರಿಗೆ ಭೇಟಿ ನೀಡಿ, ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿದ ಬಳಿಕ ಮಾತನಾಡಿದರು. ಬಿಜೆಪಿ, ಕಾರ್ಯಕರ್ತರಿಂದ ಕೂಡಿದ ಪಕ್ಷ. ನಾನು ಸಾಮಾನ್ಯ ಕಾರ್ಯಕರ್ತನಾಗಿ ಈ ಮಟ್ಟಕ್ಕೆ ಬಂದಿದ್ದೇನೆ. ರಾಜ್ಯಾದ್ಯಂತ ತಳಮಟ್ಟದಿಂದ ಪಕ್ಷವನ್ನು ಬಲಪಡಿಸಲು ಮೈಸೂರು ಜಿಲ್ಲೆ ಕಾರ್ಯ ಕರ್ತರ ಬೆಂಬಲಬೇಕು ಎಂದು ಮನವಿ ಮಾಡಿದರು. ರಾಜ್ಯದಲ್ಲಿ ಬಿ.ಎಸ್.ಯಡಿ ಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ತಿಂಗಳ ಹಿಂದೆ ಅಸ್ತಿತ್ವಕ್ಕೆ ಬಂದಿದೆ. ಸಮಗ್ರ ಕರ್ನಾಟಕ ಅಭಿವೃದ್ಧಿ ದೃಷ್ಟಿ ಯಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಾರ್ಯಕ್ರಮ ಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಕಾರ್ಯ ಕರ್ತರು ಶ್ರಮಿಸಬೇಕಾಗಿದೆ. ಇದರಿಂದ ಮುಂದಿನ ಚುನಾ ವಣೆಗೆ ಪಕ್ಷವನ್ನು ಸಂಘಟಿ ಸಲು ಅನುಕೂಲವಾಗುತ್ತದೆ ಎಂದರು. ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಕಳೆದ 5 ವರ್ಷ ಗಳಿಂದ ದೇಶದ ಅಭಿವೃದ್ಧಿ ಶರವೇಗದಲ್ಲಿ ಸಾಗುತ್ತಿದೆ.

ಅದರಂತೆ ರಾಜ್ಯದ ಅಭಿವೃದ್ಧಿಗೂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಶ್ರಮಿಸುತ್ತಿದ್ದು, ಇದಕ್ಕೆ ಪಕ್ಷ ಮತ್ತು ಕಾರ್ಯಕರ್ತರು ಬೆನ್ನೆಲುಬಾಗಿ ನಿಲ್ಲಬೇಕು ಎಂದು ಕಿವಿ ಮಾತು ಹೇಳಿದರು. ಕಳೆದ 70 ವರ್ಷಗಳ ಹಿಂದೆ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ 370ನೇ ಕಲಂನಡಿ ವಿಶೇಷ ಸ್ಥಾನಮಾನವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಜೋಡಿ ರದ್ದುಪಡಿಸುವ ಮೂಲಕ ಕಾಶ್ಮೀರವನ್ನು ಪೂರ್ಣ ಪ್ರಮಾಣದಲ್ಲಿ ಭಾರತಕ್ಕೆ ಸೇರಿಸಲಾಗಿದೆ. ಈ ವಿಷಯದಲ್ಲಿ ಬಿಜೆಪಿ ದೇಶದ ಜನತೆಗೆ ಚುನಾವಣೆ ವೇಳೆ ನೀಡಿದ್ದ ಭರವಸೆಯನ್ನು ಉಳಿಸಿಕೊಂಡಿದೆ. ಇದೇ ರೀತಿ ಮುಂದಿನ ದಿನಗಳಲ್ಲಿ ಶ್ರೀರಾಮ ಮಂದಿರವನ್ನು ಕಟ್ಟುತ್ತೇವೆ ಎಂದು ಭರವಸೆ ನೀಡಿದರು. ಮುಂದಿನ ವಿಧಾನಸಭೆ ಚುನಾವಣೆ ಕಾರ್ಯಕರ್ತರ ಚುನಾವಣೆಯಾಗಬೇಕು. ಈ ನಿಟ್ಟಿನಲ್ಲಿ ಈಗಿನಿಂದಲೇ ಪಕ್ಷವನ್ನು ತಳಮಟ್ಟದಿಂದ ಸಂಘಟನೆಗೆ ಮುಂದಾಗಬೇಕು. ಇದಕ್ಕೆ ಮೈಸೂರು ಜಿಲ್ಲೆಯ ಕಾರ್ಯಕರ್ತರ ಬೆಂಬಲ ಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಕಾರ್ಯಕರ್ತರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತಿದ್ದೇನೆ ಎಂದರು.

ರಾಜ್ಯ ಮತ್ತು ಕೇಂದ್ರದಲ್ಲಿ ಪಕ್ಷ ಅಧಿಕಾರದಲ್ಲಿರುವ ವಿಶಿಷ್ಟ ಸಂದರ್ಭದಲ್ಲಿ ಪಕ್ಷದ ಚುಕ್ಕಾಣಿ ಹಿಡಿದಿದ್ದೇನೆ. ಈ ಸಂದರ್ಭವನ್ನು ಉಪಯೋಗಿಸಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಸವಾಲು ನನ್ನ ಮೇಲಿದೆ. ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಪಕ್ಷ ಹಾಗೂ ಸರ್ಕಾರದ ಕೊಂಡಿಯಾಗಿ ಕೆಲಸ ಮಾಡಬೇಕಾಗಿದೆ ಎಂದರು. ಮುಂದಿನ ದಿನಗಳಲ್ಲಿ ರಾಜ್ಯ ಪ್ರವಾಸ ಮಾಡಿ ಪಕ್ಷ ಬಲಪಡಿಸಬೇಕಿರುವುದರಿಂದ ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲು ಬಂದಿದ್ದೇನೆ. ನಂತರ ಸುತ್ತೂರು ಮಠಾಧೀಶರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಆಶೀರ್ವಾದ ಪಡೆದಿರುವುದು ಪಕ್ಷದ ಬಲವರ್ದನೆಗೆ ಮತ್ತಷ್ಟು ಶಕ್ತಿ ತುಂಬಲಿದೆ ಎಂದರು.

ಕಾರ್ಯಕರ್ತರ ಸಂಭ್ರಮ:ನೂತನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿಜೆಪಿ ಕಚೇರಿಗೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಡೊಳ್ಳು ಬಾರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಬಿಜೆಪಿ ಮಹಿಳಾ ಕಾರ್ಯಕರ್ತರು ನೂತನ ರಾಜ್ಯಾಧ್ಯಕ್ಷರಿಗೆ ಆರತಿ ಎತ್ತುವ ಮೂಲಕ ಸ್ವಾಗತ ಕೋರಿದರು. ನೂತನ ರಾಜ್ಯಾಧ್ಯಕ್ಷರ ಸ್ವಾಗತಕ್ಕೆ ಬಿಜೆಪಿ ಕಚೇರಿ ಕಟ್ಟಡಕ್ಕೆ ವಿಶೇಷ ದೀಪದಿಂದ ಅಲಂಕರಿಸಲಾಗಿತ್ತು.

ಇದಕ್ಕೂ ಮುನ್ನ ನೂತನ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಬೆಂಗಳೂರು ರಸ್ತೆ-ರಿಂಗ್ ರಸ್ತೆ ಜಂಕ್ಷನ್‍ನಲ್ಲಿ ಸಂಸದ ಪ್ರತಾಪ ಸಿಂಹ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹೂ ಗುಚ್ಛ ನೀಡಿ ಆತ್ಮೀಯವಾಗಿ ಬರ ಮಾಡಿಕೊಂಡರು. ನಂತರ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು. ಬಳಿಕ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣಧಾಮಕ್ಕೆ ತೆರಳಿ ಪೇಜಾವರ ಶ್ರೀಗಳ ಆಶೀರ್ವಾದ ಪಡೆದರು. ನಂತರ ಸುತ್ತೂರು ಮಠಕ್ಕೆ ತೆರಳಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದವನ್ನು ಪಡೆದರು. ತದನಂತರ ಬಿಜೆಪಿ ಜಿಲ್ಲಾ ಕಚೇರಿಗೆ ಭೇಟಿ ನೀಡಿದರು. ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಂಸದ ಪ್ರತಾಪ ಸಿಂಹ, ಶಾಸಕರಾದ ಎಲ್.ನಾಗೇಂದ್ರ, ನಿರಂಜನ್‍ಕುಮಾರ್, ಮೈಸೂರು ಜಿಲ್ಲಾಧ್ಯಕ್ಷ ಎಂ.ಶಿವಣ್ಣ, ಮುಖಂಡರಾದ ಆರ್.ರಘು ಕೌಟಿಲ್ಯ, ಡಾ.ಮಂಜುನಾಥ್, ಹೆಚ್.ವಿ.ರಾಜೀವ್, ಮಾಜಿ ಶಾಸಕ ಗೋ.ಮಧುಸೂಧನ್, ಸಂದೇಶ್‍ಸ್ವಾಮಿ, ರಾಜೇಂದ್ರ, ಅರುಣ್ ಕುಮಾರ್ ಗೌಡ, ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.

Translate »