ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸಂಬಂಧ ಆಯೋಗ ರಚನೆ
News

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸಂಬಂಧ ಆಯೋಗ ರಚನೆ

April 1, 2022

ಬೆಂಗಳೂರು, ಮಾ.31(ಕೆಎಂಶಿ)-ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ವರದಿ ಪಡೆಯಲು ಆಯೋಗವೊಂದನ್ನು ರಚಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಕಲ್ಪಿಸುವ ಕುರಿತು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕರು ಹಾಗೂ ಕಾನೂನು ತಜ್ಞರೊಟ್ಟಿಗೆ ಸಮಾಲೋಚನೆ ನಡೆಸಿದ ನಂತರ ಸಚಿವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಕಾಲ ಮಿತಿಯೊಳಗೆ ವರದಿ ತರಿಸಿ, ವರದಿ ಬಂದ ನಂತರ ಸುಪ್ರೀಂಕೋರ್ಟ್‍ಗೆ ಮಾಹಿತಿ ನೀಡಿ, ನಗರ ಸ್ಥಳೀಯ ಸಂಸ್ಥೆ ಗಳಲ್ಲಿ ಮೀಸಲಾತಿ ಅನುಷ್ಠಾನಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳ ಲಿದೆ. ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸದೇ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸುವುದಿಲ್ಲ ಎಂದು ಮಾಧುಸ್ವಾಮಿ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಹಾಲಿ ಇರುವ ಮೀಸಲಾತಿ ಮುಂದಿಟ್ಟುಕೊಂಡು ಈ ಸಂಸ್ಥೆ ಗಳಿಗೆ ಚುನಾವಣೆ ನಡೆಸಲು ಸಾಧ್ಯವಿಲ್ಲ. ಇದೇ ರೀತಿ ನೆರೆಯ ಮಹಾರಾಷ್ಟ್ರ ಚುನಾವಣೆ ನಡೆಸಿದ್ದನ್ನು ಸುಪ್ರೀಂಕೋರ್ಟ್ ಸ್ಥಗಿತ ಗೊಳಿಸಿತ್ತು.

ಮಾನದಂಡವಿಲ್ಲದೆ, ಮೀಸಲಾತಿ ಕಲ್ಪಿಸಬೇಡಿ ಎಂದು ಸ್ಪಷ್ಟವಾಗಿ ನ್ಯಾಯಾಲಯ ಹೇಳಿದೆ. ಈ ಹಿನ್ನೆಲೆಯಲ್ಲಿ ಆಯೋಗ ವನ್ನು ರಚಿಸಿ, ಅವರಿಂದ ವರದಿ ತರಿಸಿಕೊಂಡು ಮೀಸಲಾತಿ ಕಲ್ಪಿಸುವ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಮೀಸಲು ಸೌಲಭ್ಯ ಕಲ್ಪಿಸದೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿದರೆ ಹಿಂದುಳಿದ ವರ್ಗ ಗಳಿಗೆ ಅನ್ಯಾಯವಾಗುತ್ತದೆ ಎಂದರು. ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈಗ ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಗ್ಗಂಟಾಗಿ ಪರಿಣಮಿಸಿದೆ. ಹೀಗಾಗಿ ಮೀಸಲು ಸೌಲಭ್ಯ ಒದಗಿಸುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಬೇಕು. ಕಾನೂನಾ ತ್ಮಕವಾಗಿ ಪರಿಶೀಲಿಸಬೇಕು ಎಂದರು. ಮೀಸಲು ಸೌಲಭ್ಯ ಒದಗಿಸುವ ಮುನ್ನ ಸಮೀಕ್ಷೆ ನಡೆಸಬೇಕು ಎಂದು ನ್ಯಾಯಾಲಯ ಹೇಳಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಈಗಾಗಲೇ ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದೆ. ಆ ವರದಿಯನ್ನು ಪರಿಗಣಿಸುವ ಸಾಧ್ಯತೆ ಕುರಿತಾಗಿಯೂ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದರು. ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಮತ್ತೊಂದು ಆಯೋಗ ವನ್ನು ರಚನೆ ಮಾಡಿ ಸಮೀಕ್ಷೆ ನಡೆಸುವುದು ಸೂಕ್ತ. ಅಲ್ಲಿಯವರೆಗೆ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬಾರದು. ಇಲ್ಲದಿದ್ದರೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಸಿಗದಂತೆ ಆಗುತ್ತದೆ. ಆ ವರ್ಗಗಳಿಗೆ ಭಾರೀ ಅನ್ಯಾಯ ವಾಗುತ್ತದೆ. ಹಿಂದುಳಿದ ವರ್ಗದವರನ್ನು ಸಾಮಾನ್ಯ ವರ್ಗದಲ್ಲಿ ಸೇರಿಸಿ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

Translate »