ಕೋವಿಡ್ ರೂಪಾಂತರಿ ಬಗ್ಗೆ ಎಚ್ಚರವಿರಲಿ; ಆತಂಕ ಬೇಡ
News

ಕೋವಿಡ್ ರೂಪಾಂತರಿ ಬಗ್ಗೆ ಎಚ್ಚರವಿರಲಿ; ಆತಂಕ ಬೇಡ

December 22, 2022

ಬೆಂಗಳೂರು, ಡಿ.21(ಕೆಎಂಶಿ)- ಕೋವಿಡ್‍ನಲ್ಲಿ ಹೊಸ ರೂಪಾಂತರಿ ವೈರಸ್‍ಗಳ ಬಗ್ಗೆ ಎಚ್ಚರವಿರಲಿ, ಆದರೆ ಆತಂಕಪಡುವುದು ಬೇಡ ಎಂದು ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರೂಪಾಂತರ ತಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದ ನಂತರ ಈ ಎಚ್ಚರಿಕೆ ನೀಡಿದ್ದಾರೆ. ವೈರಸ್ ತಡೆಗೆ ಕೇಂದ್ರದ ಮಾರ್ಗಸೂಚಿ ಜಾರಿಗೊಂಡ ನಂತರ ಅದನ್ನು ರಾಜ್ಯ ಸರ್ಕಾರವೂ ಅನುಷ್ಠಾನಗೊಳಿಸಲು ತೀರ್ಮಾನಿಸಿದೆ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಆರ್ಥಿಕ ಚಟುವಟಿಕೆಗೆ ತೊಂದರೆಯಾಗದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಕೆಲವು ಬಿಗಿ ನಿಲುವುಗಳನ್ನು ತೆಗೆದುಕೊಳ್ಳಲು ಸರ್ಕಾರ ನಿರ್ಧರಿಸಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ವಾಣಿಜ್ಯ ನಗರ ಪ್ರದೇಶಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸುವ ಬಗ್ಗೆಯು ಸರ್ಕಾರ ಚಿಂತನೆ ಮಾಡಿದೆ. ಅದರಲ್ಲೂ ರೈಲು, ಬಸ್, ಮಾಲ್, ಸಿನಿಮಾ ಮಂದಿರ ಹಾಗೂ ಜನದಟ್ಟಣೆ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲು ಮುಂದಾಗಿದೆ. ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್, ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‍ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದನ್ನು ಅನುಷ್ಠಾನಗೊಳಿಸುವುದಾಗಿ ತಿಳಿಸಿದ್ದಾರೆ. ಚೀನಾ, ಜಪಾನ್ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‍ನ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಚೀನಾದಲ್ಲಿ ಆಸ್ಪತ್ರೆ ದಾಖಲಾತಿ ಕೂಡ ಹೆಚ್ಚಾಗುತ್ತಿದೆ. ಆದ್ದರಿಂದ ಲಸಿಕೆಯ ಮೂರನೇ ಡೋಸ್ ಪಡೆಯಲು ಆದ್ಯತೆ ನೀಡಬೇಕಿದೆ. ಹೊಸದಾಗಿ ಸೋಂಕಿಗೊಳಗಾಗುವವರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸ್ ಪರೀಕ್ಷೆಗೆ ನೀಡಲು ಕೇಂದ್ರ ಸರ್ಕಾರದಿಂದ ಸೂಚನೆ ಬಂದಿದೆ. ಇದಕ್ಕೆ ಈಗಾಗಲೇ ಕ್ರಮ ವಹಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಕೆಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಿದೆ. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಅತೀ ಹೆಚ್ಚು ಪ್ರಯಾಣಿಕರು ಬರುತ್ತಿದ್ದಾರೆ. ಇಲ್ಲಿಯೂ ನಿಗಾ ಇರಿಸಲು ಆರಂಭಿಸಲಾಗುವುದು. ಎರಡು ಡೋಸ್‍ಗಳಲ್ಲಿ ಶೇ.100ರಷ್ಟು ಸಾಧನೆಯಾಗಿದೆ. ಆದರೆ ಅನೇಕರು ಮೂರನೇ ಡೋಸ್ ಪಡೆದಿಲ್ಲ. ಅಂತಹವರು ಮುಂದೆ ಬಂದು ಮೂರನೇ ಲಸಿಕೆ ಪಡೆಯಬೇಕು ಎಂದು ಮನವಿ ಮಾಡಿದರು.

Translate »