ಮಾಜಿ ಸಚಿವ ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣಬ್ ಮೊಹಾಂತಿ, ಪ್ರಸಾದ್‍ಗೆ ಬಿಗ್ ರಿಲೀಫ್
ಮೈಸೂರು

ಮಾಜಿ ಸಚಿವ ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣಬ್ ಮೊಹಾಂತಿ, ಪ್ರಸಾದ್‍ಗೆ ಬಿಗ್ ರಿಲೀಫ್

November 5, 2020

ಬೆಂಗಳೂರು, ನ.4-ಡಿವೈಎಸ್‍ಪಿ ಎಂ.ಕೆ.ಗಣ ಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಜೆ.ಜಾರ್ಜ್ ಮತ್ತು ಐಪಿಎಸ್ ಅಧಿಕಾರಿಗಳಾದ ಪ್ರಣಬ್ ಮೊಹಾಂತಿ ಹಾಗೂ ಎ.ಎಂ.ಪ್ರಸಾದ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಈ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿದ್ದ ಬಿ-ರಿಪೋರ್ಟ್ ಅನ್ನು ತಿರಸ್ಕರಿಸಿ, ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್ ಅನ್ನು ಹೈಕೋರ್ಟ್ ನ್ಯಾಯಮೂರ್ತಿ ಮೈಕಲ್ ಡಿ.ಕುನ್ಹಾ ವಜಾಗೊಳಿಸುವ ಮೂಲಕ ಈ ಮೂವರು ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ.

ಈ ಪ್ರಕರಣ ಸಂಬಂಧ ಈ ಹಿಂದೆ ಸಿಐಡಿ ಮತ್ತು ಸಿಬಿಐ ವಿಚಾರಣೆ ನಡೆಸಿ ಬಿ-ರಿಪೋರ್ಟ್ ಸಲ್ಲಿಸಿದ್ದವು. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಜೆ.ಜಾರ್ಜ್ ಮತ್ತು ಐಪಿಎಸ್ ಅಧಿಕಾರಿಗಳಾದ ಪ್ರಣಬ್ ಮೊಹಾಂತಿ ಹಾಗೂ ಎ.ಎಂ.ಪ್ರಸಾದ್ ಪಾತ್ರವಿಲ್ಲ ಎಂದು ಆ ತನಿಖಾ ಸಂಸ್ಥೆಗಳು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದವು. ಆದರೆ ತನಿಖಾ ಸಂಸ್ಥೆಗಳ ವರದಿಗಳನ್ನು ಪ್ರಶ್ನಿಸಿ ಗಣಪತಿ ಅವರ ಪುತ್ರ ನೇಹಲ್ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಪುರಸ್ಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಬಿಐ ಸಲ್ಲಿಸಿದ್ದ ಬಿ-ರಿಪೋರ್ಟ್ ಅನ್ನು ನಿರಾಕರಿಸಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಅದನ್ನು ಪ್ರಶ್ನಿಸಿ ಮಾಜಿ ಸಚಿವರೂ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ತನಿಖಾ ಸಂಸ್ಥೆಗಳ ವರದಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್, ಈ ಮೂವರನ್ನು ಈ ಪ್ರಕರಣದಲ್ಲಿ ಸುಖಾಸುಮ್ಮನೆ ಎಳೆದು ತರಲಾಗಿದೆ ಎಂದು ನ್ಯಾಯಮೂರ್ತಿಗಳು ತಮ್ಮ ಆದೇಶದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

 

 

Translate »