ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಪ್ರಾರ್ಥಿಸಿ, ಚಾ.ಬೆಟ್ಟದಲ್ಲಿ ಬಿಜೆಪಿ ಯುವ ಮೋರ್ಚಾ ವಿಶೇಷ ಪೂಜೆ
ಮೈಸೂರು

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಪ್ರಾರ್ಥಿಸಿ, ಚಾ.ಬೆಟ್ಟದಲ್ಲಿ ಬಿಜೆಪಿ ಯುವ ಮೋರ್ಚಾ ವಿಶೇಷ ಪೂಜೆ

August 11, 2018

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲೆಂದು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲೆಂದು ಪ್ರಾರ್ಥಿಸಿ ಇಂದು ಬಿಜೆಪಿ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಅವರು ತಮ್ಮ ಬೆಂಬಲಿಗರೊಂದಿಗೆ ಮೆಟ್ಟಿಲುಗಳ ಮೂಲಕ ಚಾಮುಂಡಿಬೆಟ್ಟ ಹತ್ತಿ ವಿಶೇಷ ಪೂಜೆ ಸಲ್ಲಿಸಿದರು.

ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಯುವ ಮೋರ್ಚಾದ ಕಾರ್ಯಕರ್ತರು ಹಾಗೂ ಸ್ಥಳೀಯ ಬಿಜೆಪಿ ಮುಖಂಡರೊಂದಿಗೆ ಇಂದು ಬೆಳಿಗ್ಗೆ ಪೂಜೆ ಸಲ್ಲಿಸಿ ವಿಜಯೇಂದ್ರ ಬೆಟ್ಟ ಹತ್ತಿದರು. ನಂತರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ದೇಶಕ್ಕೆ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರದಾನಿಯಾಗಿ ಆಯ್ಕೆಯಾಗಬೇಕು. ಅಲ್ಲದೆ, ರಾಜ್ಯಕ್ಕೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಯಾಗಿ ಆಯ್ಕೆಯಾಗುವುದಕ್ಕೆ ಆಶೀರ್ವದಿಸುವಂತೆ ಕೋರಿದರು.

ಇದೇ ವೇಳೆ ಮಾತನಾಡಿದ ಬಿ.ವೈ.ವಿಜಯೇಂದ್ರ, ದೇಶ ಹಾಗೂ ರಾಜ್ಯಕ್ಕೆ ಒಳಿತಾಗಲೆಂದು ಪ್ರಾರ್ಥಿಸಿ ಚಾಮುಂಡಿಬೆಟ್ಟ ಹತ್ತುತ್ತಿದ್ದೇನೆ. ದೇಶವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯುತ್ತಮವಾಗಿ ಮುನ್ನಡೆಸು ತ್ತಿದ್ದಾರೆ. ಈ ಹಿನ್ನೆಲೆಯಲ್ಲಿ 2019ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಅವರು ಪ್ರಧಾನಿಯಾಗಬೇಕು ಎಂದು ಪೂಜೆ ಸಲ್ಲಿಸಿದ್ದೇನೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಹೆಚ್.ಮಂಜುನಾಥ್, ಜಿಲ್ಲಾಧ್ಯಕ್ಷ ಕೋಟೆ ಎಂ.ಶಿವಣ್ಣ, ತಾಪಂ ಮಾಜಿ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಮುಖಂಡ ರಾದ ಕಾ.ಪು.ಸಿದ್ದಲಿಂಗಸ್ವಾಮಿ, ಜಗದೀಶ್, ಕೇಬಲ್ ಮಹೇಶ್ ಪಾಲ್ಗೊಂಡಿದ್ದರು.

Translate »