ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್‍ಗಾಗಿ ಬಿವಿಎಸ್ ಪ್ರತಿಭಟನೆ
ಮೈಸೂರು

ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್‍ಗಾಗಿ ಬಿವಿಎಸ್ ಪ್ರತಿಭಟನೆ

July 13, 2018

ಮೈಸೂರು: ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೂ ಉಚಿತ ಬಸ್‍ಪಾಸ್ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬಹುಜನ ವಿದ್ಯಾರ್ಥಿ ಸಂಘದ (ಬಿವಿಎಸ್) ಆಶ್ರಯದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಎಲ್ಲಾ ವರ್ಗದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ ಉಚಿತ ಬಸ್‍ಪಾಸ್ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಹಿಂದಿನ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ್ದ ಎಸ್‍ಸಿ ಹಾಗೂ ಎಸ್‍ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ಯೋಜನೆಯನ್ನು ಪ್ರಸಕ್ತ ಶೈಕ್ಷಣಿಕ ಸಾಲಿಗೂ ಮುಂದುವರೆಸಿರುವುದು ಸ್ವಾಗತಾರ್ಹ. ಆದರೆ ಈ ಸೌಲಭ್ಯ ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೂ ದೊರಕಿಸಿಕೊಡುವುದು ನ್ಯಾಯಸಮ್ಮತವಾಗಿದೆ. ಈ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತ ವರ್ಗಗಳು ಹಾಗೂ ಸಾಮಾನ್ಯ ವರ್ಗಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳು ಉಚಿತ ಸಾರಿಗೆ ಸೌಲಭ್ಯ ನೀಡುವ ನಿಟ್ಟಿನಲ್ಲಿ ಉಚಿತ ಬಸ್‍ಪಾಸ್ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಕೇವಲ ಎಸ್‍ಸಿ ಹಾಗೂ ಎಸ್‍ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ನೀಡಿದರೆ ವಿದ್ಯಾರ್ಥಿ ಸಮುದಾಯದ ನಡುವೆ ಅಂತರ ಹೆಚ್ಚಾಗಲಿದೆ. ವಿವಿಧ ಸಮುದಾಯ ನಡುವಿನ ಸಾಮರಸ್ಯಕ್ಕೆ ಕುಂದುಂಟಾಗಲಿದೆ. ಶೋಷಿತ ಸಮುದಾಯದ ಶ್ರೇಯೋಭಿವೃದ್ಧಿಗೆ ಸರ್ಕಾರಕ್ಕೆ ನಿಜಕ್ಕೂ ಕಾಳಜಿ ಇದ್ದಲ್ಲಿ ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೊಳಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ಬ್ಯಾಕ್‍ಲಾಗ್ ಹುದ್ದೆಗಳ ಭರ್ತಿ, ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿಗಳ ಊಟದ ಭತ್ಯೆ ಹಾಗೂ ವಿದ್ಯಾರ್ಥಿವೇತನವನ್ನು ಹೆಚ್ಚಳ ಮಾಡುವುದು, ಸರ್ಕಾರಿ ಶಾಲೆಗಳಲ್ಲಿ ಉದ್ಯೋಗಾಧಾರಿತ ಗುಣಮಟ್ಟದ ಶಿಕ್ಷಣ ನೀಡಲು ಹಾಗೂ ಪ್ರಾಥಮಿಕ ಹಂತದಲ್ಲಿ ಇಂಗ್ಲಿಷ್ ಶಿಕ್ಷಣ ನೀಡುವಂತಹ ಕ್ರಮಗಳನ್ನು ಕೈಗೊಂಡು ಶೋಷಿತ ಸಮುದಾಯಗಳನ್ನು ಮುಖ್ಯವಾಹಿನಿಗೆ ತರಬೇಕೆಂದು ಎಂದು ಮನವಿ ಮಾಡಿದರು.

ಬಿವಿಎಸ್ ಜಿಲ್ಲಾ ಸಂಯೋಜಕ ವಸಂತ್, ನಗರ ಸಂಯೋಜಕ ಶಾಕ್ಯಗಣಿ , ಜಿಲ್ಲಾಧ್ಯಕ್ಷ ನವೀನ್ ಮೌರ್ಯ, ಕಾರ್ಯಕರ್ತರಾದ ಸಾಗರ್, ರಾಜೇಶ್, ಪ್ರತಾಪ್, ನಾರಾಯಣಸ್ವಾಮಿ, ರಮೇಶ್ ತಾಯೂರು, ಜಿ.ಕೆ.ಸಂತೋಷನ್, ಮಹೇಶ್, ಮಧುಸೂದನ್, ರವಿಕುಮಾರ್ ಹಾಗೂ ಮಹಾರಾಜ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »