ಮೈಸೂರು, ಸೆ.23 (ಆರ್‍ಕೆಬಿ)- ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ವಾಹನ ಚಾಲಕರು ಹಾಗೂ ವಾಟರ್‍ಮನ್‍ಗಳಿಗೆ ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಸೌಲಭ್ಯ ಜಾರಿಗೆ ಆಗ್ರಹಿಸಿ ಸೆಪ್ಟೆಂಬರ್ 28ರಂದು ರಾಜ್ಯದೆಲ್ಲೆಡೆ ಸ್ಥಳೀಯ ಸಂಸ್ಥೆ ಕಚೇರಿಗಳೆದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯ ಹೊರಗುತ್ತಿಗೆ ವಾಹನ ಚಾಲಕರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ ಮೈಸೂರಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಎರಡೂ ವಿಭಾಗದಿಂದ ರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಹೊರಗುತ್ತಿಗೆ ಚಾಲಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಗರಗಳ ಸ್ವಚ್ಛತೆ ನಿರ್ವಹಣೆಯಲ್ಲಿ ತ್ಯಾಜ್ಯ ಸಾಗಾಣಿಕೆಯ ಚಾಲಕರ ಪಾತ್ರ ಹೆಚ್ಚಿನದಾಗಿದೆ. ಹಾಗಾಗಿ ಪೌರಕಾರ್ಮಿಕರಿಗೆ ಸಮಾನವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಾಟರ್‍ಮನ್‍ಗಳೂ ಸೇವಾಭದ್ರತೆಯಿಲ್ಲದೆ ಕನಿಷ್ಠ ವೇತನಕ್ಕೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಕುರಿತು ಸರ್ಕಾರದ ಗಮನ ಸೆಳೆಯಲು ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿಸಿದರು.
ಸಂಘದ ಮೈಸೂರು ಜಿಲ್ಲಾಧ್ಯಕ್ಷ ರಘು, ಬೆಂಗಳೂರು ಜಿಲ್ಲಾಧ್ಯಕ್ಷ ಶ್ರೀನಿವಾಸ್, ಮಂಡ್ಯ ಜಿಲ್ಲಾಧ್ಯಕ್ಷ ದಿನೇಶ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.