ಬೆಂಗಳೂರು, ಜು. 29- ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ನೇಮಕಗೊಂಡಿದ್ದ ನಿಗಮ-ಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರ ಅಧಿಕಾರಾವಧಿ ಅಂತ್ಯಗೊಂಡಿದೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದ ಎಲ್ಲಾ ನಿಗಮ-ಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರ ನೇಮಕಾತಿಗಳ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರದ ಮುಖ್ಯ ಕಾರ್ಯದರ್ಶಿ ತ.ಮ. ವಿಜಯಭಾಸ್ಕರ್ ಅವರಿಗೆ ಪತ್ರ ಬರೆದಿದ್ದಾರೆ.
ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಮತ್ತು ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅರವಿಂದ ಮಾಲಗತ್ತಿ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯ ದರ್ಶಿಗಳಿಗೆ ಈ ಪತ್ರ ರವಾನಿಸಿದ್ದಾರೆ. ಮೈತ್ರಿ ಸರ್ಕಾರದ ಕೊನೆ ದಿನಗಳಲ್ಲಿ ಅಂದರೆ ವಿಧಾನಸಭೆಯಲ್ಲಿ ವಿಶ್ವಾಸ ಮತದ ಮೇಲೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಸಹ ಕೆಲ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಿದ್ದು, ಅವರುಗಳು ಕೇವಲ ಒಂದೇ ವಾರದಲ್ಲಿ ತಮ್ಮ ಅಧಿಕಾರ ಕಳೆದುಕೊಳ್ಳುತ್ತಿದ್ದಾರೆ.