ಮೈಸೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಮೈಸೂರಿನ ಆಲ್ಬರ್ಟ್ ವಿಕ್ಟರ್ ರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ಮೈಸೂರಿನ ಕೂರ್ಗಳ್ಳಿ ನಿವಾಸಿ ಸೋಮ ಶೇಖರ್(27) ಅಪಘಾತದಲ್ಲಿ ಮೃತಪಟ್ಟವರು. ಸ್ವಿಗ್ಗಿ ಫುಡ್ ಡೆಲಿವರಿ ಸರ್ವೀಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಇವರು, ಶುಕ್ರವಾರ ಮಧ್ಯಾಹ್ನ 2 ಗಂಟೆ ಸಮಯದಲ್ಲಿ ತಮ್ಮ ಹೀರೋ ಸ್ಪ್ಲೆಂಡರ್ ಬೈಕ್(ಕೆಎ-09, ಹೆಚ್‍ಆರ್-8219)ನಲ್ಲಿ ಕೆ.ಆರ್.ವೃತ್ತದಿಂದ ಹಾರ್ಡಿಂಜ್ ವೃತ್ತದ ಕಡೆಗೆ ಹೋಗುತ್ತಿದ್ದಾಗ ಆಲ್ಬರ್ಟ್ ವಿಕ್ಟರ್ ರಸ್ತೆ, ಡಾ.ರಾಜ್ ಕುಮಾರ್ ಉದ್ಯಾನದ ಬಳಿ ಎದುರಿನಿಂದ ವೇಗವಾಗಿ ಬಂದ ಕಾರು(ಕೆಎ-53, ಬಿ-7793) ಡಿಕ್ಕಿ ಹೊಡೆದಿದೆ. ಪರಿಣಾಮ ನೆಲಕ್ಕುರುಳಿದ ಸೋಮ ಶೇಖರ್ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಕೂಡಲೇ ಅವರನ್ನು ಸಾರ್ವಜನಿಕರು ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಸಂಜೆ 5 ಗಂಟೆ ವೇಳೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೋಮಶೇಖರ್ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ದೇವರಾಜ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.