ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ
ಮೈಸೂರು

ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ

November 28, 2018

ಬೆಂಗಳೂರು: ರಾಜ್ಯದ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿ ಸಿದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವ ಕುಮಾರ್, ಯೋಜನೆಗೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸುವುದು ಸರಿಯಲ್ಲ. ತಮಿಳುನಾಡಿಗೆ ಸಮಸ್ಯೆಯಾಗದ ರೀತಿ ಯೋಜನೆ ಜಾರಿಗೊಳಿಸುತ್ತೇವೆ. ಗಡಿ ಭಾಗದಲ್ಲಿ ಯೋಜನೆ ಅನುಷ್ಠಾನಕ್ಕೆ ಬರುವುದರಿಂದ ಕೃಷಿಗೆ ನೀರು ಬಳಕೆ ಮಾಡು ವುದಿಲ್ಲ. ಅದೇ ಕಾಲಕ್ಕೆ ನ್ಯಾಯಾಲಯದ ಆದೇಶದಂತೆ ಅವರಿಗೆ ಬಿಡುವ ನೀರಿನಲ್ಲಿಯೂ ಯಾವುದೇ ವ್ಯತ್ಯಾಸ ಆಗುವುದಿಲ್ಲ.

ತಮಿಳುನಾಡು ಬಯಸಿದರೆ ಮಾತು ಕತೆಗೆ ನಾವು ಸದಾಸಿದ್ಧ. ಮುಂದಿನ ತಿಂಗಳು 6 ರಂದು ನಡೆಯುವ ಸಭೆಯಲ್ಲಿ ಮುಖ್ಯ ಮಂತ್ರಿಗಳ ಜತೆ ಸಮಾಲೋಚನೆ ನಡೆಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳ ಲಿದ್ದೇವೆ ಎಂದರು.

ಯೋಜನೆ ಅನುಷ್ಠಾನಗೊಳ್ಳುವುದರಿಂದ ಬೆಂಗಳೂರು ನಗರ ಮತ್ತು ಸುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಕಲ್ಪಿಸಲು ಸಹಕಾರಿ ಯಾಗುತ್ತದೆ. ಅಲ್ಲದೆ 250 ರಿಂದ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ, ಅದನ್ನು ಉಭಯ ರಾಜ್ಯಗಳು ಹಂಚಿಕೊಳ್ಳ ಬಹುದು. ಯೋಜನೆ ಆರಂಭಿಸುವುದಾಗಿ ಬಜೆಟ್‍ನಲ್ಲಿ ಘೋಷಣೆ ಮಾಡಿರುವುದ ಲ್ಲದೆ, ಸಂಪುಟದ ಒಪ್ಪಿಗೆಯನ್ನೂ ಪಡೆದು ಕೊಳ್ಳಲಾಗಿದೆ. ರಾಜ್ಯ ಸರಕಾರ ಕಳೆದ ಜುಲೈನಲ್ಲಿ ಕೇಂದ್ರ ಜಲ ಆಯೋಗಕ್ಕೆ ವರದಿ ಸಲ್ಲಿಸಿತ್ತು. ಅಲ್ಲದೇ ಕಳೆದ ಸೆಪ್ಟೆಂಬರ್‍ನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆಯ ಅಗತ್ಯತೆ ಕುರಿತು ಮನವರಿಕೆ ಮಾಡಿಕೊಟ್ಟಿದ್ದರು. ಆದಷ್ಟು ಶೀಘ್ರ ಯೋಜನೆಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದರು.

ರಾಜ್ಯ ಸರ್ಕಾರದ ಮನವಿಯ ಹಿನ್ನೆಲೆಯಲ್ಲಿ ಇತ್ತೀಚೆಗೆ ಕೇಂದ್ರ ಜಲ ಆಯೋಗ ಸಭೆ ನಡೆಸಿ ಯೋಜನೆ ಸಾಧ್ಯತೆಯ ಬಗ್ಗೆ ರಾಜ್ಯ ಸರ್ಕಾರ ಕಳುಹಿಸಿದ ಪ್ರಾಥಮಿಕ ಮಾಹಿತಿಗೆ ಒಪ್ಪಿಗೆ ನೀಡಿದ್ದು, ಯೋಜನೆಯ ಬಗ್ಗೆ ಸಂಪೂರ್ಣ ವರದಿ ಸಿದ್ಧಪಡಿಸಿ ಕಳುಹಿಸುವಂತೆ ಸೂಚಿಸಿದೆ. ಅಲ್ಲದೇ ಈ ಯೋಜನೆಯಿಂದ ತಮಿಳುನಾಡಿಗೆ ಕಾವೇರಿಯಿಂದ ಪ್ರತಿ ವರ್ಷ ಬಿಡುವ ನೀರಿನ ಪ್ರಮಾಣದಲ್ಲಿ ಯಾವುದೇ ವ್ಯತ್ಯಾಸ ವಾಗದಂತೆ ಯೋಜನಾ ವರದಿ ಸಿದ್ಧಪಡಿಸುವಂತೆ ಸೂಚಿಸಿದೆ. ರಾಜಧಾನಿಯಿಂದ 100 ಕಿಲೋ ಮೀಟರ್ ದೂರದಲ್ಲಿರುವ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮೇಕೆದಾಟು ಪ್ರದೇಶದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಸುಮಾರು 5912 ಕೋಟಿ ರೂಪಾಯಿ ವೆಚ್ಚದಲ್ಲಿ 66 ಟಿಎಂಸಿ ನೀರು ಸಂಗ್ರಹ ಸಾಮಥ್ರ್ಯದ ಅಣೆಕಟ್ಟೆ ಕಟ್ಟಿ, ಅಲ್ಲಿಂದ ಬೆಂಗಳೂರು, ರಾಮನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಮಾಡುವುದು ಮತ್ತು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವುದು ಯೋಜನೆಯ ಉದ್ದೇಶವಾಗಿದೆ.

Translate »