ಪ್ರಧಾನಿ ಮೋದಿ ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ
ಮೈಸೂರು

ಪ್ರಧಾನಿ ಮೋದಿ ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

December 28, 2018

ನವದೆಹಲಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳು, ಬರ ಪರಿಸ್ಥಿತಿ ಹಾಗೂ ಉದ್ಯೋಗ ಖಾತರಿ ಯೋಜನೆಗೆ ಹಣ ಬಿಡುಗಡೆ ಮುಂತಾದವುಗಳ ಬಗ್ಗೆ ಚರ್ಚಿಸಿ ಮನವಿ ಸಲ್ಲಿಸಿದರು.

ಪ್ರಧಾನಿ ಭೇಟಿ ನಂತರ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿಗಳು, ಮೇಕೆದಾಟು ಯೋಜನೆಗೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರಧಾನಿ ಮಧ್ಯಪ್ರವೇಶ ಮಾಡಬೇಕೆಂದು ಮನವಿ ಮಾಡಲಾಗಿದೆ. ಈ ಯೋಜನೆಯು 67 ಟಿಎಂಸಿ ಸಾಮಥ್ರ್ಯ ಹೊಂದಿದ್ದು, ಬೆಂಗಳೂರಿಗೆ ಹೆಚ್ಚುವರಿಯಾಗಿ ಸುಪ್ರೀಂ ಕೋರ್ಟ್ ಹಂಚಿಕೆ ಮಾಡಿರುವ 4.75 ಟಿಎಂಸಿ ನೀರು ಬಳಸಿಕೊಳ್ಳಲು ಹಾಗೂ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ಉದ್ದೇಶಿಸಲಾಗಿದೆ ಎಂದು ಪ್ರಧಾನಿಯವರಿಗೆ ವಿವರಿಸಲಾಯಿತು ಎಂದರು. ಕೃಷ್ಣಾ ನ್ಯಾಯಾಧೀಕರಣ-2ರಡಿ ಕರ್ನಾಟಕಕ್ಕೆ ನೀರಾವರಿ ಉದ್ದೇಶಕ್ಕಾಗಿ 166 ಟಿಎಂಸಿ ನೀರು ಹಂಚಿಕೆಯಾಗಿದ್ದು, ತೀರ್ಪು ಹೊರಬಿದ್ದು 5 ವರ್ಷ ಕಳೆದರೂ, ಅದರ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸದೇ ಇರುವುದರಿಂದ ರಾಜ್ಯಕ್ಕೆ ತನ್ನ ಪಾಲಿನ ನೀರನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಕುರಿತು ಶೀಘ್ರ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಿದರು. ಮಹದಾಯಿ ಜಲ ವಿವಾದ ನ್ಯಾಯಾಧೀಕರಣವು ತನ್ನ ಅಂತಿಮ ಆದೇಶದಲ್ಲಿ ಕರ್ನಾಟಕಕ್ಕೆ 13.42 ಟಿಎಂಸಿ ನೀರು ಹಂಚಿಕೆ ಮಾಡಿದ್ದು, ಈ ಸಂಬಂಧವೂ ಗೆಜೆಟ್ ಅಧಿಸೂಚನೆಯನ್ನು ಶೀಘ್ರವೇ ಹೊರಡಿಸಬೇಕೆಂದು ಮನವಿ ಮಾಡಲಾಗಿದೆ.

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, ಮುಂಗಾರು ಹಂಗಾಮಿನಲ್ಲಿ 16662.48 ಕೋಟಿ ನಷ್ಟವಾಗಿದ್ದು, ಎನ್‍ಡಿಆರ್‍ಎಫ್ ಮಾನದಂಡಗಳ ಪ್ರಕಾರ 2434 ಕೋಟಿ ರೂ. ಬಿಡುಗಡೆಗೆ ಮನವಿ ಸಲ್ಲಿಸಲಾಗಿತ್ತು. ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಹಿಂದಿನ ಬಾಕಿ ಸೇರಿದಂತೆ 2538 ಕೋಟಿ ರೂ. ಅನುದಾನ ರಾಜ್ಯಕ್ಕೆ ಬರಬೇಕಾಗಿದ್ದು, ಅದನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಪ್ರಧಾನಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ವಿಮಾನ ಯಾನ ಸಚಿವ ಸುರೇಶ್ ಪ್ರಭು ಅವರನ್ನು ಭೇಟಿಯಾಗಿದ್ದು, ಮೈಸೂರು ಸೇರಿದಂತೆ ರಾಜ್ಯದ ವಿವಿಧ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚಿಸಿದರು. ಭಾರತೀಯ ವಾಯುಪಡೆಯು ಬೆಂಗಳೂರಿನ ಯಲಹಂಕದಲ್ಲಿರುವ ತನ್ನ ಹೆಲಿಕಾಪ್ಟರ್ ತರಬೇತಿ ವಿಭಾಗವನ್ನು ಮೈಸೂರು ವಿಮಾನ ನಿಲ್ದಾಣಕ್ಕೆ ಸ್ಥಳಾಂತರಿಸಲು ಪ್ರಸ್ತಾವನೆ ಸಲ್ಲಿಸಿದೆ. ಪುಣೆ, ಶ್ರೀನಗರ, ಚಂಡೀಘಡ, ವಿಮಾನ ನಿಲ್ದಾಣಗಳ ಮಾದರಿ ಮೈಸೂರು ವಿಮಾನ ನಿಲ್ದಾಣವನ್ನೂ ಸಹ ತನ್ನದೇ ವೆಚ್ಚದಲ್ಲಿ ಅಭಿವೃದ್ಧಿಪಡಿಸಿ ನಾಗರಿಕ ಬಳಕೆ ಹಾಗೂ ಮಿಲಿಟರಿ ಬಳಕೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಸಮ್ಮತಿಸಿದೆ. ಇದರಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಮೇಲಿನ ಒತ್ತಡವೂ ಕಡಿಮೆಯಾಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರವು ಈ ಸ್ಥಳಾಂತರಕ್ಕೆ ನಿರಾಕ್ಷೇಪಣಾ ಪತ್ರ ನೀಡಿದ್ದು, ಆರೋಗ್ಯ ವಾಯುಪಡೆಗೆ ಮೈಸೂರು ವಿಮಾನ ನಿಲ್ದಾಣವನ್ನು ಅದರ ಹೆಲಿಕಾಪ್ಟರ್ ಬೇಸ್‍ಗೆ ಬಳಸಿಕೊಳ್ಳಲು ಅನುಮತಿ ನೀಡುವಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು.

ಬೀದರ್ ವಿಮಾನ ನಿಲ್ದಾಣ ನಿರ್ಮಾಣ ಪೂರ್ಣಗೊಂಡು ಕಾರ್ಯಾಚರಣೆಗೆ ಸಜ್ಜಾಗಿದ್ದು, ಈ ಕುರಿತು ಜಿಹೆಚ್‍ಇಎಎಲ್‍ನೊಂದಿಗೆ ಒಪ್ಪಂದ ಅಂತಿಮ ಹಂತದಲ್ಲಿದ್ದು, ಶೀಘ್ರವೇ ಒಪ್ಪಂದಕ್ಕೆ ಸಹಿ ಮಾಡುವಂತೆ ಸಂಬಂದಪಟ್ಟವರಿಗೆ ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು. ಅದಲ್ಲದೇ ಕಲಬುರ್ಗಿ ವಿಮಾನ ನಿಲ್ದಾಣ ಅಭಿವೃದ್ಧಿ ಬಗ್ಗೆಯೂ ಚರ್ಚಿಸಲಾಗಿದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯಪುರ ಮತ್ತು ಕಾರವಾರಗಳಲ್ಲಿ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದು ಅದರ ಸಂಪೂರ್ಣ ವಿವರಗಳನ್ನು ಮುಖ್ಯಮಂತ್ರಿಗಳು ವಿಮಾನ ಯಾನ ಸಚಿವರಿಗೆ ನೀಡಿದರು.

Translate »