ಮೈಸೂರು, ಚಾ.ನಗರ, ಕೊಡಗಲ್ಲಿ ಕಟ್ಟೆಚ್ಚರಕ್ಕೆ ಸಿಎಂ ಸೂಚನೆ
News

ಮೈಸೂರು, ಚಾ.ನಗರ, ಕೊಡಗಲ್ಲಿ ಕಟ್ಟೆಚ್ಚರಕ್ಕೆ ಸಿಎಂ ಸೂಚನೆ

November 28, 2021

ಬೆಂಗಳೂರು,ನ.27-ಕೊರೊನಾ ರೂಪಾಂತರ ತಳಿ ಓಮಿ ಕ್ರಾನ್ ವೈರಸ್ ತಡೆ ಹಾಗೂ ಕೋವಿಡ್-19 ನಿಯಂತ್ರಣಕ್ಕಾಗಿ ಮೈಸೂರು, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಗಡಿ ಯಲ್ಲಿ ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿ ಗಳಿಗೆ ಸೂಚಿಸಿದ್ದಾರೆ. ಓಮಿಕ್ರಾನ್ ವೈರಸ್ ತಡೆ ಹಾಗೂ ಕೋವಿಡ್-19 ನಿಯಂತ್ರಣ ಸಂಬಂಧ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮೈಸೂರು, ಕೊಡಗು, ಚಾಮರಾಜನಗರ, ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ ಜಿಲ್ಲೆ ಹಾಗೂ ಬಿಬಿಎಂಪಿ ವ್ಯಾಪ್ತಿಯ ಜಿಲ್ಲಾಧಿಕಾರಿಗಳ ಜೊತೆ ವೀಡಿಯೋ ಸಂವಾದ ಹಾಗೂ ಅಧಿಕಾರಿಗಳ ಸಭೆ ನಡೆಸಿದ ಸಿಎಂ, ಎಲ್ಲಾ ಜಿಲ್ಲಾಧಿಕಾರಿಗಳಿಗೂ
ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅಲ್ಲದೆ ಕ್ರಿಸ್‍ಮಸ್ ಮತ್ತು ಹೊಸ ವರ್ಷದ ಮಾರ್ಗಸೂಚಿಗಾಗಿ ಮತ್ತೊಂದು ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಕೇರಳಾ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದು ತಿಳಿಸಿದ ಮುಖ್ಯಮಂತ್ರಿಗಳು, ಈ ರಾಜ್ಯಗಳಿಂದ ಬರುವವರಿಗೆ ಆರ್‍ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿರಬೇಕು. ಗಡಿ ಜಿಲ್ಲೆಗಳಲ್ಲಿ 3 ಪಾಳಿಯಲ್ಲಿ ದಿನದ 24 ಗಂಟೆಯೂ ತಪಾಸಣಾ ಕಾರ್ಯ ಕಟ್ಟುನಿಟ್ಟಾಗಿ ನಡೆಯಬೇಕು. ಅದಕ್ಕಾಗಿ ಜಿಲ್ಲಾಧಿಕಾರಿ ಗಳು ಎಲ್ಲಾ ಇಲಾಖೆಗಳ ಸಹಕಾರವನ್ನು ಪಡೆಯಬೇಕು ಎಂದು ಅವರು ಹೇಳಿದರು.
16 ದಿನಗಳ ಹಿಂದೆ ಕೇರಳಾದಿಂದ ಬಂದಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಮತ್ತೊಮ್ಮೆ ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿಸಬೇಕು. ಹಾಸ್ಟೆಲ್‍ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗೆಟಿವ್ ರಿಪೋರ್ಟ್ ಬಂದ ನಂತರ ಪ್ರತಿ 7 ದಿನಕ್ಕೊಮ್ಮೆ ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿಸಬೇಕು. ಹೋಟೆಲ್, ರೆಸ್ಟೋರೆಂಟ್, ಸಿನಿಮಾ ಹಾಲ್‍ಗಳು, ಈಜುಕೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು. ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‍ಗಳಲ್ಲಿಯೇ ಲಸಿಕೆ ನೀಡುವ ವ್ಯವಸ್ಥೆಯನ್ನು ಕಲ್ಪಿಸಬೇಕು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ತೀವ್ರಗೊಳಿಸಿ ಪಾಸಿಟಿವ್ ವರದಿ ಬಂದವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಸಭೆಯಲ್ಲಿ ಸಚಿವರಾದ ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥ್‍ನಾರಾಯಣ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್, ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರೋಗ್ಯ ಇಲಾಖೆ ಕಾರ್ಯದರ್ಶಿ ಟಿ.ಕೆ.ಅನಿಲ್‍ಕುಮಾರ್, ಆಯುಕ್ತ ರಂದೀಪ್ ಸೇರಿದಂತೆ ಅನೇಕ ಅಧಿಕಾರಿಗಳು ಭಾಗವಹಿಸಿದ್ದರು.

Translate »