ಡಿಕೆಶಿ ವಿರುದ್ಧ ಕೇಂದ್ರ ಷಡ್ಯಂತರ ಖಂಡಿಸಿ ಮೈಸೂರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಮೈಸೂರು

ಡಿಕೆಶಿ ವಿರುದ್ಧ ಕೇಂದ್ರ ಷಡ್ಯಂತರ ಖಂಡಿಸಿ ಮೈಸೂರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

June 2, 2018

ಮೈಸೂರು:  ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಬಿಜೆಪಿ ಸರ್ಕಾರ ಬಹುಮತ ಸಾಬೀತು ಪಡಿಸಲು ಸಾಧ್ಯವಾಗದೇ ಪತನವಾಗಲು ಪ್ರಮುಖ ಕಾರಣರಾದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಆಪ್ತರ ಮೇಲೆ ಕೇಂದ್ರ ಉದ್ದೇಶಪೂರ್ವಕವಾಗಿ ಸಿಬಿಐ ದಾಳಿ ನಡೆಸಿ, ದ್ವೇಷದ ರಾಜಕಾರಣ ಮಾಡುತ್ತಿದೆ. ಆ ಮೂಲಕ ಡಿ.ಕೆ.ಶಿವಕುಮಾರ್ ಅವರನ್ನು ಮಣ ಸುವ ಸಂಚು ನಡೆಸಲಾಗುತ್ತಿದೆ ಎಂದು ಆರೋಪಿಸಿ ಮೈಸೂರಿನ ರೈಲ್ವೆ ನಿಲ್ದಾಣದ ಬಳಿಯಿರುವ ಕಾಂಗ್ರೆಸ್ ಕಚೇರಿ ಬಳಿ ಡಿಕೆಶಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಟ ರಾಜ್ಯದಲ್ಲಿ ನಡೆಯಲು ಬಿಡದೆ ಕಾಂಗ್ರೆಸ್ ಶಾಸಕರನ್ನು ಸಂಘಟಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕಾರಣದಿಂದ ಆಪರೇಷನ್ ಕಮಲ ನಡೆಸಲು ಅವಕಾಶ ನೀಡದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ವಿರುದ್ಧ ಕೇಂದ್ರ ಸರ್ಕಾರ ಐಟಿ ಹಾಗೂ ಸಿಬಿಐ ದಾಳಿ ನಡೆಸುವ ಮೂಲಕ ಸೇಡು ತೀರಿಸಿಕೊಳ್ಳಲು ಮುಂದಾಗಿದೆ. ರಾಜಕೀಯವಾಗಿ ಪ್ರಬಲವಾಗಿರುವ ಡಿಕೆಶಿ ಕುಟುಂಬವನ್ನು ದುರ್ಬಲಗೊಳಿಸಿ, ರಾಜಕೀಯ ಲಾಭ ಮಾಡಿಕೊಳ್ಳುವುದಕ್ಕಾಗಿ ಬಿಜೆಪಿ ಮುಂದಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇದೇ ವೇಳೆ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಬಳಗದ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಶ್ರೀನಾಥ್ ಬಾಬು ಮಾತನಾಡಿ, ಕೇಂದ್ರ ಸರ್ಕಾರ ರಾಜಕೀಯ ಎದುರಾಳಿಗಳನ್ನು ದಮನ ಮಾಡಲು ಸಿಬಿಐ, ಇಡಿ ಹಾಗೂ ಆದಾಯ ತೆರಿಗೆ ಇಲಾಖೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಈ ಹಿಂದೆ ಉದ್ದೇಶಪೂರ್ವಕವಾಗಿ ಐಟಿ ಅಧಿಕಾರಿಗಳಿಂದ ದಾಳಿ ನಡೆಸಿ ಡಿ.ಕೆ.ಶಿವಕುಮಾರ್ ಅವರಿಗೆ ಕಿರುಕುಳ ನೀಡಿದ್ದ ಕೇಂದ್ರ ಸರ್ಕಾರ ಇದೀಗ ಸಿಬಿಐ ಅನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಬಿಜೆಪಿ ಆಪರೇಷನ್ ಕಮಲ ಮಾಡಲು ಅವಕಾಶ ನೀಡಿದ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ನಿವಾಸದ ಮೇಲೆ ದಾಳಿ ನಡೆಸಿ ಹೆದರಿಸುವ ತಂತ್ರಗಾರಿಕೆ ಮಾಡಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಬಿಜೆಪಿ ನಾಯಕರೇ ಅತೀ ಹೆಚ್ಚು ಅಕ್ರಮ ನಡೆಸಿ ಭ್ರಷ್ಟಾಚಾರ, ರೈತರ ಭೂಕಬಳಿಕೆಯ ಪ್ರಕರಣದಲ್ಲಿ ಪಾಲ್ಗೊಂಡಿದ್ದಾರೆ. ಈ ಹಿಂದೆ ಅಧಿಕಾರದಲ್ಲಿದ್ದ ಐದು ವರ್ಷದಲ್ಲಿ ಬಿಜೆಪಿ ನಾಯಕರು ಭೂಕಬಳಿಕೆ, ಲಂಚ ಪಡೆಯುವುದು, ಅಧಿಕಾರ ದುರ್ಬಳಕೆ ಮಾಡಿಕೊಂಡು ಹಗರಣಗಳನ್ನು ನಡೆಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು ಜೈಲಿಗೆ ಹೋಗಿ ಬಂದಿದ್ದಾರೆ. ಆದರೂ ಪ್ರದಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಪ್ರಬಲ ನಾಯಕರ ಮೇಲೆ ಗದಾಪ್ರಹಾರ ನಡೆಸುತ್ತಿದೆ. ಕೂಡಲೇ ಕೇಂದ್ರ ಸರ್ಕಾರ ಸಿಬಿಐ, ಇಡಿ ಹಾಗೂ ಐಟಿ ಇಲಾಖೆಯನ್ನು ದುರುಪಯೋಗ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಮಾಜಿ ಮೇಯರ್ ಬಿ.ಕೆ.ಪ್ರಕಾಶ್, ಮುಖಂಡರಾದ ಜಿ.ರಾಘವೇಂದ್ರ, ಸುಂದರ ಕುಮಾರ್, ಗೀರೀಶ್, ವಿನಯ್ ಕಣಗಾಲ್, ಮೊಗಣ್ಣಾಚಾರ್, ದುರ್ಗೆಶ್, ಡೈರಿ ವೆಂಕಟೇಶ್, ಶಿವಲಿಂಗಪ್ಪ, ಲೋಕೇಶ್‍ರಾವ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Translate »