ಮೈಸೂರು: ಸಚಿವ ಸ್ಥಾನದಿಂದ ವಂಚಿತರಾಗಿ ಅತೃಪ್ತರಾಗಿರುವ ಕಾಂಗ್ರೆಸ್‍ನ ಹಲವು ಶಾಸಕರು ನನ್ನ ಸಂಪರ್ಕದಲ್ಲಿದ್ದು, ಮುಂದೇನಾಗುತ್ತದೆ ಕಾದು ನೋಡಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಬಾಂಬ್ ಸಿಡಿಸಿದ್ದಾರೆ.
ಜನ್ಮ ದಿನದ ಹಿನ್ನೆಲೆಯಲ್ಲಿ ಭಾನುವಾರ ಚಾಮುಂಡಿಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿವೆ. ಈ ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಈಗಾಗಲೇ ಒಳಗೊಳಗೇ ಅಸಮಾಧಾನ ಹೆಚ್ಚಾಗಿದೆ. ಕಾಂಗ್ರೆಸ್ ಜೆಡಿಎಸ್‍ಗೆ ಶರಣಾದಂತೆ ಕಾಣುತ್ತಿದೆ. ಅತೃಪ್ತ ಶಾಸಕರು ಕಾಂಗ್ರೆಸ್ ಪಕ್ಷದಿಂದ ಹೊರಗೆ ಬರಲು ಸಿದ್ಧರಾಗಿದ್ದಾರೆ. ಸಚಿವ ಸಂಪುಟದಲ್ಲಿ ಸ್ಥಾನ ದೊರಕದೇ ಇರುವ ಹಿರಿಯ ಕಾಂಗ್ರೆಸ್ ಶಾಸಕರ ನೇತೃತ್ವದಲ್ಲಿ ಹಲವು ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಶೀಘ್ರದಲ್ಲಿಯೇ ರಾಜ್ಯ ರಾಜಕಾರಣದ ಚಿತ್ರ ಏನಾಗಲಿದೆ ಎಂದು ಕಾದು ನೋಡಿ ಎಂದು ಮಾರ್ಮಿಕವಾಗಿ ನುಡಿದರು.
ನಾವು ಕಾಂಗ್ರೆಸ್ ಮುಕ್ತ ಭಾರತ ಮಾಡಲು ಹೊರಟಿದ್ದೇವೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ಸಿಗರೇ ಕಾಂಗ್ರೆಸ್ ಮುಕ್ತ ಮಾಡಲು ಮುಂದಾಗಿದ್ದಾರೆ. ಅದರ ಮೊದಲ ಹೆಜ್ಜೆಯಾಗಿ ಜೆಡಿಎಸ್‍ನೊಂದಿಗೆ ಕೈಜೋಡಿಸಿದ್ದಾರೆ ಎಂದು ಲೇವಡಿ ಮಾಡಿದ ಅವರು, ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿಯೇ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಮೊದಲನೇ ಹೆಜ್ಜೆಯಾಗಿದೆ. ಆ ಪಕ್ಷದ ಅಧ್ಯಕ್ಷರೇ ತನ್ನ ಶಾಸಕರನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಛೇಡಿಸಿದರು.