ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ
ಹಾಸನ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ

January 12, 2019

ಹಾಸನ: ರಾಜ್ಯದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರೆಯಲಿದ್ದು, ನಮ್ಮ ಪಕ್ಷಕ್ಕೆ ಎಷ್ಟು ಸೀಟು ಕೊಡುತ್ತಾರೆ ಇನ್ನು ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ನೊಂದಿಗೆ ಮೈತ್ರಿ ಮುಂದುವರಿಯಲ್ಲಿದ್ದು, ನಮಗೆ ಎಷ್ಟು ಸೀಟು ಕೊಡುತ್ತಾರೋ ಗೊತ್ತಿಲ್ಲ. ಈ ಬಗ್ಗೆ ರಾಹುಲ್ ಗಾಂಧಿ, ವೇಣುಗೋಪಾಲ್, ಸಿದ್ದರಾಮಯ್ಯ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡೋ ಬಗ್ಗೆ ಇನ್ನು ತೀರ್ಮಾನ ಮಾಡಿಲ್ಲ ಎಂದರು.

ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಜೆಡಿಎಸ್‍ಗೆ ನೀಡುವ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಮಾಜಿ ಸಿಎಂ ವೀರಪ್ಪಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯಿಸಿದ ಗೌಡರು, ಅವರೇ ಜೆಡಿಎಸ್‍ಗೆ 10 ಸ್ಥಾನ ಬಿಟ್ಟು ಕೊಡಬೇಕು ಎಂದಿದ್ದಾರೆ ಎಂದರು.

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜಾತಿಯವರಿಗೆ ಮೀಸಲು ನೀಡಿಕೆ ವಿಚಾರವಾಗಿ ಮಾತನಾಡಿ, ಇತ್ತೀಚೆಗೆ ಕೇಂದ್ರ ಸರ್ಕಾರದ ಜನಪ್ರಿಯತೆ ಕುಗ್ಗುತ್ತಿರುವುದರಿಂದ ಈ ಅಸ್ರ್ತ ಬಳಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮೇಲ್ವರ್ಗದ ಜನರನ್ನು ಓಲೈಸಿ,ಶತಾಯಗತಾಯ ಚುನಾವಣೆಯಲ್ಲಿ ಗೆಲ್ಲಲು ಮೋದಿ ಈ ಮೀಸಲು ಅಸ್ತ್ರ ಬಳಸಿದ್ದಾರೆ ಎಂದು ಲೇವಡಿ ಮಾಡಿದರು. ಇದೇ ಕಾರಣಕ್ಕೆ ಮರು ಮಾತನಾಡದೆ ಎಲ್ಲಾ ಪಕ್ಷಗಳವರೂ ಬೆಂಬಲ ನೀಡಿದ್ದಾರೆ. ಇದು ಸುಪ್ರೀಂಕೋರ್ಟ್‍ಗೆ ಹೋಗಿದೆ ಅಲ್ಲಿ ಏನಾಗುತ್ತದೆ ಕಾದು ನೋಡೋಣ ಎಂದರು.

ಸಿಬಿಐ ನಿರ್ದೇಶಕರ ವಜಾ ವಿಚಾರ ಮಾತನಾಡಿ, ಪರಸ್ಪರ ಆಪಾದನೆ ನಂತರ ಪ್ರಕರಣ ಸುಪ್ರೀಂ ಮೆಟ್ಟಿಲೇರಿತ್ತು. ಇದು ಕೇವಲ ತಾಂತ್ರಿಕ ವಿಚಾರ ಅಷ್ಟೆ ಸಿಬಿಐ ಸೇರಿ ಅನೇಕ ಸ್ವಾಯತ್ತ ಸಂಸ್ಥೆಗಳ ದುರ್ಬಳಕೆ ಆಗಿರುವುದು ಹೊಸದಲ್ಲ . ಇತ್ತೀಚಿನ ದಿನಗಳಲ್ಲಿ ಇದು ಹೆಚ್ಚಾಗಿದೆ ಎಂದು ವಿಷಾದವ್ಯಕ್ತಪಡಿಸಿದರು.

Translate »