ಸುಮಲತಾ ರ್ಯಾಲಿಯಲ್ಲಿ ಕಾಂಗ್ರೆಸ್ಸಿಗರು; ಸಿಎಂ ಅಸಮಾಧಾನ ಡಿಕೆಶಿಯಿಂದ ಕಾಂಗ್ರೆಸ್ ಮುಖಂಡರ ಸಭೆ
ಮಂಡ್ಯ

ಸುಮಲತಾ ರ್ಯಾಲಿಯಲ್ಲಿ ಕಾಂಗ್ರೆಸ್ಸಿಗರು; ಸಿಎಂ ಅಸಮಾಧಾನ ಡಿಕೆಶಿಯಿಂದ ಕಾಂಗ್ರೆಸ್ ಮುಖಂಡರ ಸಭೆ

March 21, 2019

ಮಂಡ್ಯ: ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಸಿದ ನಂತರ ನಡೆದ ರ್ಯಾಲಿ ಮತ್ತು ಸಮಾವೇಶದಲ್ಲಿ ಕಾಂಗ್ರೆಸ್ ಮುಖಂಡರು ಬಹಿರಂಗವಾಗಿಯೇ ಕಾಣಿಸಿಕೊಂಡಿರುವ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಕರೆ ಮಾಡಿದ ಕುಮಾರಸ್ವಾಮಿ, ತಾವು ಈಗಾಗಲೇ ಮಂಡ್ಯ ಕಾಂಗ್ರೆಸ್ ಮುಖಂಡರ ಸಭೆ ಕರೆದು ಸುಮಲತಾ ಅವರಿಗೆ ಬೆಂಬಲ ನೀಡಬಾರದೆಂದು ತಿಳಿಸಿದ್ದರೂ ಕೂಡ ಕೆಪಿಸಿಸಿ ಸದಸ್ಯ ಸಚ್ಚಿದಾನಂದ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಸುಮಲತಾ ರ್ಯಾಲಿಯಲ್ಲಿ ಭಾಗವಹಿಸಿದ್ದಾರೆ ಎಂಬುದನ್ನು ಗಮನಕ್ಕೆ ತಂದರು.

ಮಂಡ್ಯದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್‍ಕುಮಾರಸ್ವಾಮಿ ಕಣದಲ್ಲಿದ್ದು, ಕಾಂಗ್ರೆಸ್ ಮುಖಂಡರು ಬಹಿರಂಗವಾಗಿಯೇ ಸುಮಲತಾ ಅವರಿಗೆ ಬೆಂಬಲ ವ್ಯಕ್ತಪಡಿಸು ತ್ತಿರುವುದು ಮೈತ್ರಿಗೆ ಧಕ್ಕೆಯುಂಟು ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಮಂಡ್ಯ ಕಾಂಗ್ರೆಸ್ ಮುಖಂಡರ ಸಭೆ ಕರೆಯಲಿದ್ದಾರೆ ಎಂದು ಹೇಳಲಾಗಿದ್ದು, ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಅವರನ್ನು ಬೆಂಬಲಿಸಬೇಕು ಹಾಗೂ ಸುಮಲತಾ ಅವರನ್ನು ಬೆಂಬಲಿಸಬಾರದೆಂದು ತಾಕೀತು ಮಾಡಲಿದ್ದಾರೆ. ಒಂದು ವೇಳೆ ಸುಮಲತಾ ಅವರನ್ನು ಬೆಂಬಲಿಸಿದರೆ ಶಿಸ್ತುಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Translate »