ಮೈಸೂರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಮೈಸೂರು

ಮೈಸೂರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

December 27, 2018

ಮೈಸೂರು: ಮಾಜಿ ಸಚಿವ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡದಿರುವ ಕಾಂಗ್ರೆಸ್ ಹೈಕಮಾಂಡ್ ಧೋರಣೆಯನ್ನು ಖಂಡಿಸಿ, ತನ್ವೀರ್‍ಸೇಠ್ ಅಭಿಮಾನಿ ಬಳಗದ ಸದಸ್ಯರು ಹಾಗೂ ಎನ್.ಆರ್. ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಬನ್ನಿಮಂಟಪದ ಹೈವೇ ವೃತ್ತದ ಬಳಿ ಬುಧವಾರ ಸಂಜೆ ರಸ್ತೆ ತಡೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ನೇತೃತ್ವವನ್ನು ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಖಾದರ್ ಶಾಹಿದ್ ವಹಿಸಿದ್ದರು. ಕಾಂಗ್ರೆಸ್ ರಾಜ್ಯ ನಾಯಕರ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ, ತನ್ವೀರ್ ಸೇಠ್ ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಗದಿರುವ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ದೂರಿದರು.

ಚಾಮರಾಜನಗರ. ಕೊಡಗು, ಮೈಸೂರು, ಚಾಮ ರಾಜನಗರ, ಹಾಸನ ಜಿಲ್ಲೆಗಳಲ್ಲಿ ಮುಸ್ಲಿಂ ಸಮುದಾಯದ ಏಕೈಕ ಶಾಸಕ ತನ್ವೀರ್ ಸೇಠ್. ಅವರಿಗೂ ಸಚಿವ ಸ್ಥಾನ ನೀಡದಿದ್ದರೆ, ಈ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವುದು ಹೇಗೆ? ಎಂದು ಪ್ರಶ್ನಿಸಿದರಲ್ಲದೆ, ಈ ಬಾರಿ ಸಚಿವ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಗಣನೆಗೆ ತೆಗೆದುಕೊಳ್ಳದಿರುವುದರಿಂದ ಹಳೇ ಮೈಸೂರು ಭಾಗದ ಮುಸ್ಲಿಂರಿಗೆ ತೀವ್ರ ಬೇಸರ ತರಿಸಿದೆ ಎಂದರು.
ಕಾಂಗ್ರೆಸ್ ಹೈಕಮಾಂಡ್ 2ನೇ ಬಾರಿ ಸಚಿವ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಮಾಜಿ ಸಚಿವ ತನ್ವೀರ್ ಸೇಠ್ ಅವರಿಗೆ ಸಿಕ್ಕೇ ಸಿಗುತ್ತದೆ ಎಂದು ಈ ಭಾಗದ ಕಾಂಗ್ರೆಸ್ ಕಾರ್ಯಕರ್ತರು, ಚಾತಕ ಪಕ್ಷಿಗಳಂತೆ ಕಾಯುತ್ತಿದ್ದರು. ಆದರೆ, ಅದು ನೆರವೇರಲಿಲ್ಲ ಎಂದು ರಾಜ್ಯ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದರಲ್ಲದೆ, ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದರು.

ತನ್ವೀರ್ ಸೇಠ್ ಅವರು, ಒಮ್ಮೆ ಕಾರ್ಮಿಕ ಸಚಿವರಾಗಿ, ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಅಲ್ಪಸಂಖ್ಯಾತ ಕಲ್ಯಾಣ ಇಲಾಖಾ ಸಚಿವರಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದರು. ಆದರೆ, ಕಾಂಗ್ರೆಸ್ -ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಯಾವುದೇ ಕೆಲಸಗಳಾಗುತ್ತಿಲ್ಲ. ಬದಲಿಗೆ ಬೆರಳೆಣಿಕೆ ನಾಯಕರ ಕೆಲಸಗಳಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಹೈಕಮಾಂಡ್ ಕೂಡಲೇ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಲೋಕಸಭಾ ಚುನಾ ವಣೆಗೆ ಪಕ್ಷ ಸಂಘಟಿಸಲು ಅನುವು ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸಂಚಾರದಲ್ಲಿ ವ್ಯತ್ಯಯ: ದಿಢೀರ್ ರಸ್ತೆ ತಡೆ ನಡೆಸಿದ್ದ ರಿಂದ ಹೈವೇ ವೃತ್ತದ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತೀವ್ರ ಅಡ್ಡಿಯಾಯಿತು. ಪರಿಸ್ಥಿತಿಯನ್ನು ತಿಳಿಗೊಳಿಸಲು ಪೊಲೀಸರು ಹರಸಾಹಸಪಟ್ಟರು.

Translate »