ಮೇಕೆದಾಟು ಅಣೆಕಟ್ಟು  ಯೋಜನೆಗೆ 1000 ಕೋಟಿ
News

ಮೇಕೆದಾಟು ಅಣೆಕಟ್ಟು ಯೋಜನೆಗೆ 1000 ಕೋಟಿ

March 5, 2022

ಬೆಂಗಳೂರು, ಮಾ.4(ಕೆಎಂಶಿ)-ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು 20,000 ಕೋಟಿ ರೂ. ಗಳನ್ನು ತಮ್ಮ ಮುಂಗಡ ಪತ್ರದಲ್ಲಿ ತೆಗೆದಿರಿ ಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೇಕೆದಾಟು ಸಮತೋಲನಾ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಗಳನ್ನು ಕೈಗೆತ್ತಿಕೊಳ್ಳಲು 1,000 ಕೋಟಿ ರೂ. ಅನುದಾನ ಒದಗಿಸಿದ್ದಾರೆ. ಎತ್ತಿನಹೊಳೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳಿಗೆ ತಲಾ 3,000 ಕೋಟಿ ರೂ.ಗಳನ್ನು, ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗೆ 5,000 ಕೋಟಿ ರೂ., ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆಗೆ 1,000 ಕೋಟಿ ರೂ.ಗಳನ್ನು ಪ್ರತೇಕವಾಗಿ ತೆಗೆದಿರಿಸಿದ್ದಾರೆ. ಕೃಷ್ಣರಾಜ ಸಾಗರ ಅಣೆಕಟ್ಟೆಗೆ ಸಮಾನಾಂತರವಾಗಿ ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರಿಗಳ ತೀರುವಳಿಗಳನ್ನು ಪಡೆದು ಯೋಜನೆ ಅನುಷ್ಠಾನಗೊಳಿಸುವುದು ಶತಸಿದ್ಧ, ಇದಕ್ಕಾಗಿ 1,000 ಕೋಟಿ ರೂ.ಗಳನ್ನು ನಿಗದಿಪಡಿಸಿದ್ದೇನೆ ಎಂದಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಮಾನ್ಯತೆ ಪಡೆದು ಕೇಂದ್ರದ ನೆರವಿನೊಂದಿಗೆ ಅನುಷ್ಠಾನಗೊಳಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಚಿತ್ರದುರ್ಗ ಶಾಖಾ ಕಾಲುವೆಯ 60 ಕಿಲೋಮೀಟರ್‍ವರೆಗಿನ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಆಸುಪಾಸಿನ ಕೆರೆಗಳನ್ನು ಭರ್ತಿ ಮಾಡಿ 20,150 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ಮಹತ್ವಾಕಾಂಕ್ಷಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಪ್ರಥಮ ಹಂತದ ಕಾಮಗಾರಿಗಳಿಗೆ ಪ್ರಸಕ್ತ ಸಾಲಿನಲ್ಲಿ ಪ್ರಾಯೋಗಿಕವಾಗಿ ಚಾಲನೆ ನೀಡಲಾಗುವುದು. ಈ ಯೋಜನೆಯ 2ನೇ ಹಂತದ 260 ಕಿಲೋ ಮೀಟರ್ ಉದ್ದದ ಗುರುತ್ವ ಕಾಲುವೆ ಕಾಮಗಾರಿ ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಿ ಮುಂದಿನ ವರ್ಷದ ಮುಂಗಾರು ಹಂಗಾಮಿನಲ್ಲಿ ನೀರು ಪೂರೈಸಲು ಕ್ರಮ ಜರುಗಿಸಲಾಗುವುದು. ಹಂತ ಹಂತವಾಗಿ ಯೋಜನೆ ಕಾರ್ಯಗತಗೊಳಿಸಲು ಕ್ರಮ ಕೈಗೊಂಡು ಇದಕ್ಕಾಗಿ 3,000 ಕೋಟಿ ರೂ.ಗಳನ್ನು ಮೀಸಲಿರಿಸಿದ್ದೇನೆ.

ತುಂಗಭದ್ರಾ ಜಲಾಶಯಕ್ಕೆ ನವಿಲೆ ಬಳಿ ಸಮತೋಲನ ಜಲಾಶಯ ನಿರ್ಮಿಸಲು ಯೋಜನಾ ವರದಿ ಸಿದ್ಧಪಡಿಸಲಾಗಿದೆ. ಈ ಪ್ರಸ್ತಾವನೆ ಕುರಿತು ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳೊಂದಿಗೆ ಸಮಾಲೋಚಿಸಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು, ಇದಕ್ಕಾಗಿ 1,000 ಕೋಟಿ ರೂ. ಒದಗಿಸಲಾಗಿದೆ. ರಾಜ್ಯದ ಕೆರೆಗಳ ಸಮಗ್ರ ಅಭಿವೃದ್ಧಿಯನ್ನು 500 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಕ್ರಿಯಾಯೋಜನೆ ರೂಪಿಸಲಾಗಿದೆ.

Translate »