ಸಕಾಲಕ್ಕೆ ಚಿಕಿತ್ಸೆ ದೊರೆಯದೆ ಕೊರೊನಾ ಸೋಂಕಿತರ ಸಾವು ಅಗತ್ಯ ಸೌಲಭ್ಯ ಒದಗಿಸುವಂತೆ ಕೋರಿ ಮುಖ್ಯಮಂತ್ರಿಗಳಿಗೆ ಶಾಸಕ ತನ್ವೀರ್ ಸೇಠ್ ಪತ್ರ
ಮೈಸೂರು

ಸಕಾಲಕ್ಕೆ ಚಿಕಿತ್ಸೆ ದೊರೆಯದೆ ಕೊರೊನಾ ಸೋಂಕಿತರ ಸಾವು ಅಗತ್ಯ ಸೌಲಭ್ಯ ಒದಗಿಸುವಂತೆ ಕೋರಿ ಮುಖ್ಯಮಂತ್ರಿಗಳಿಗೆ ಶಾಸಕ ತನ್ವೀರ್ ಸೇಠ್ ಪತ್ರ

August 7, 2020

ಮೈಸೂರು, ಆ.6(ಆರ್‍ಕೆ)-ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿಗಳ ಕೊರತೆ ಯಿಂದಾಗಿ ಸಕಾಲಕ್ಕೆ ಸೂಕ್ತ ಚಿಕಿತ್ಸೆ ದೊರೆಯದೆ ಕೊರೊನಾ ಸೋಂಕಿತ ರೋಗಿಗಳು ಸಾವನ್ನಪ್ಪುತ್ತಿದ್ದಾರೆ ಎಂದು ಮೈಸೂರಿನ ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಆಗಸ್ಟ್ 5ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಕೋವಿಡ್-19 ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಮೈಸೂರಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರಸ್ತುತ ಲಭ್ಯವಿರುವ ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿಗಳ ಸಂಖ್ಯೆ ತೀರಾ ಕಡಿಮೆ ಇರುವ ಕಾರಣ ಅವರ ಮೇಲೆ ಕಾರ್ಯ ಒತ್ತಡವೂ ಹೆಚ್ಚಾಗಿದೆ ಎಂದಿದ್ದಾರೆ.

ಇದರಿಂದಾಗಿ ಸರಿಯಾದ ಸಮಯದಲ್ಲಿ ಸೂಕ್ತ ಚಿಕಿತ್ಸೆ ಲಭ್ಯವಿಲ್ಲದ ಕಾರಣ, ಕೋವಿಡ್ ರೋಗಿಗಳು ಮರಣ ಹೊಂದುತ್ತಿರುವುದು ಕಂಡು ಬಂದಿರುವುದರಿಂದ ಸ್ನಾತಕೋತ್ತರ ಪದವಿ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂತಿಮ ವರ್ಷದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ನೇಮಕ ಮಾಡಿಕೊಳ್ಳಿ ಎಂದು ಅವರು ಒತ್ತಾಯಿಸಿದ್ದಾರೆ.

ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೆ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರ ಸುಪರ್ಧಿಗೆ ತೆಗೆದು ಕೊಂಡು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ಮೈಸೂರು ನಗರಕ್ಕೆ 300 ಹೆಚ್ಚುವರಿ ವೆಂಟಿಲೇಟರ್‍ಗಳ ಅಗತ್ಯವಿರುವುದರಿಂದ ಶಾಸಕರು ತಮ್ಮ ಅನುದಾನದಲ್ಲಿ ನೀಡಿರುವ ಹಣವನ್ನು ಈ ಉದ್ದೇಶಕ್ಕೆ ಬಳಸಿ ಸೂಕ್ತ ಚಿಕಿತ್ಸಾ ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕೆಂದು ತನ್ವೀರ್ ಸೇಠ್ ಅವರು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Translate »