ಜಿಲ್ಲಾ ಕೋವಿಡ್ ಆಸ್ಪತ್ರೆ ದುರಂತ ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗಕ್ಕೆ ಬಿಎಸ್‍ಪಿ ಆಗ್ರಹ
ಚಾಮರಾಜನಗರ

ಜಿಲ್ಲಾ ಕೋವಿಡ್ ಆಸ್ಪತ್ರೆ ದುರಂತ ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗಕ್ಕೆ ಬಿಎಸ್‍ಪಿ ಆಗ್ರಹ

May 5, 2021

ಚಾಮರಾಜನಗರ, ಮೇ 4-ನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಹಾಗೂ ಪ್ರತಿ ಕುಟುಂಬಕ್ಕೊಂದು ಸರ್ಕಾರಿ ಉದ್ಯೋಗ ನೀಡಬೇಕು ಎಂದು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಆಗ್ರಹಿಸಿದರು.

ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ ಅವರು, ಕೋವಿಡ್ ನಿರ್ವಹಣೆ ಯಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಹೀಗೆ ಮುಂದುವರಿದರೆ ರಾಜ್ಯದಲ್ಲಿ ಲಕ್ಷಾಂತರ ಜನ ಪ್ರಾಣ ಕಳೆದುಕೊಳ್ಳಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಕಾರ್ಯಪಡೆ ರಚಿಸಿ: ರಾಜ್ಯಮಟ್ಟದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು, ಮುಖ್ಯಕಾರ್ಯದರ್ಶಿ ಹಾಗೂ ಆರೋಗ್ಯ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ ರಚನೆಯಾಗಬೇಕು. ಜಿಲ್ಲಾ ಮಟ್ಟದಲ್ಲಿ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲಾಧಿಕಾರಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಗಳ ಕಾರ್ಯಪಡೆ, ತಾಲೂಕು ಮಟ್ಟದಲ್ಲಿ ಶಾಸಕರು, ತಹಸೀಲ್ದಾರ್, ಕಾರ್ಯ ನಿರ್ವಹಣಾಧಿಕಾರಿ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಪಡೆ ರಚಿಸಬೇಕು. ಈ ಪಡೆಗಳು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲೇ ಉಳಿದು, ಗಂಟೆಗೊಮ್ಮೆ ಪ್ರತಿ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳ ಅಗತ್ಯತೆಗಳ ಪರಿಶೀಲಿಸಬೇಕು ಎಂದು ಸಲಹೆ ನೀಡಿದರು.

ಆಸ್ಪತ್ರೆಗಳಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಸರ್ಕಾರಕ್ಕೆ ಮಾಹಿತಿ ನೀಡಿ ಕ್ರಮ ಕೈಗೊಳ್ಳಬೇಕು. ಚಿಕಿತ್ಸೆಗೆಂದು ಆಸ್ಪತ್ರೆಗೆ ಬರುವ ಯಾವ ವ್ಯಕ್ತಿಗೂ ಬೆಡ್, ಆಕ್ಸಿಜನ್, ವೆಂಟಿಲೇಟರ್ ಹಾಗೂ ಔಷಧೋಪಚಾರ ಕೊರತೆಯಾಗದಂತೆ ಯುದ್ಧೋಪಾದಿಯಲ್ಲಿ ಕೆಲಸ ಮಾಡಿದರೆ ಮಾತ್ರ ಕೋವಿಡ್ ಸಂತ್ರಸ್ತರ ಜೀವ ಉಳಿಯುತ್ತದೆ ಎಂದರು.

ಸಚಿವರನ್ನು ಹೊಣೆಯಾಗಿಸಿ: ಪ್ರಸ್ತುತ ಪ್ರಕರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಸಚಿವರನ್ನು ಹೊಣೆ ಮಾಡಬೇಕು. ಹಾಗೇ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯ ಅಧಿಕಾರಿಯನ್ನು ವಜಾ ಮಾಡಬೇಕು. ಸ್ಥಳೀಯ ಸಂಸದ ಹಾಗೂ ನಾಲ್ವರು ಶಾಸಕರು ನೈತಿಕ ಹೊಣೆ ಹೊತ್ತು ಅವರ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಎಂ.ಕೃಷ್ಣಮೂರ್ತಿ ಆಗ್ರಹಿಸಿದರು.
ಪ್ರಕರಣ ಸಂಬಂಧಿಸಿದಂತೆ ತನಿಖೆಗೆ ನೇಮಕ ಮಾಡಿರುವ ಕರ್ನಾಟಕ ರಾಜ್ಯ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಅವರಿಂದ ಪ್ರಾಮಾಣಿಕ ತನಿಖೆ ಸಾಧ್ಯವಿಲ್ಲ. ಮುಖ್ಯಮಂತ್ರಿಗೆ ಆಪ್ತರಾಗಿರುವ ಇವರು ಖಂಡಿತ ವಾಗಿಯೂ ನ್ಯಾಯಯುತವಾದ ವರದಿ ನೀಡುವುದಿಲ್ಲ. ಇದರಿಂದ ಇವರ ಬದಲಿಗೆ ದಕ್ಷ ಅಧಿಕಾರಿಗಳೆಂದು ಹೆಸರು ಪಡೆದಿರುವ ಹರ್ಷಗುಪ್ತ, ರಶ್ಮಿ ಮಹೇಶ್, ಶಿಖಾರಂತಹ ಪ್ರಾಮಾಣಿಕ ಅಧಿಕಾರಿಗಳನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.

ಮೊಕದ್ದಮೆ ದಾಖಲಿಸಿ : ಆಕ್ಸಿಜನ್ ಇಲ್ಲದೆ ಕೇವಲ ಮೂವರು ಮಾತ್ರ ಪ್ರಾಣ ಬಿಟ್ಟಿದ್ದಾರೆ ಎಂದು ಹೇಳುವ ಮೂಲಕ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿರುವ ಆರೋಗ್ಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರ ಇನ್ನಾದರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಲಿ. ಇಲ್ಲದಿದ್ದರೆ ಮುಖ್ಯ ಮಂತ್ರಿ ಸಹಿತ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ಎಂದ ಎಂ.ಕೃಷ್ಣಮೂರ್ತಿ, ಇಡೀ ವ್ಯವಸ್ಥೆ ಹದಗೆಟ್ಟಿದ್ದು ಜನರು ರೊಚ್ಚಿಗೇಳುವ ಮೊದಲು ಎಚ್ಚೆತ್ತುಕೊಳ್ಳಿಲಿ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ, ಜಿಲ್ಲಾಧ್ಯಕ್ಷ ನಾಗಯ್ಯ, ಉಪಾಧ್ಯಕ್ಷ ಬಸವಣ್ಣ, ಪ್ರಧಾನ ಕಾರ್ಯದರ್ಶಿ ಬ.ಮಾ.ಕೃಷ್ಣಮೂರ್ತಿ ರಾಜೇಂದ್ರ, ಆಶ್ರಿತ್, ಪ್ರಕಾಶ್ ಮುಂತಾದವರಿದ್ದರು.

Translate »