ಫಲಾನುಭವಿಗಳಿಗೆ ನಿವೇಶನ ಒದಗಿಸಿ: ಡಿಸಿ
ಹಾಸನ: ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಿರುವ 7,388 ಅರ್ಹ ಫಲಾನುಭವಿಗಳಿಗೆ ವಿವಿಧ ವಸತಿ ಯೋಜನೆಯಡಿ ನಿವೇಶನ ಒದಗಿಸಲು ಅಧಿಕಾರಿಗಳು ಪ್ರಥಮ ಆದ್ಯತೆ ನೀಡಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ವಸತಿ ಯೋಜನೆಗಳ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ನಿವೇಶನ ಹಂಚಿಕೆಗೆ ಗುರುತಿಸಿರುವ ಸರ್ಕಾರದ ಜಮೀನು, ಗೋಮಾಳ ಹಾಗೂ ಖರೀದಿಸಿದ ಖಾಸಗಿ ಜಮೀನುಗಳನ್ನು ನಿವೇಶನಗಳನ್ನಾಗಿ ಮಾರ್ಪಡಿಸಿ ವಿತರಣೆಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ನಿವೇಶನಗಳ ಹಂಚಿಕೆಗೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಒತ್ತುವರಿ ಜಾಗಗಳನ್ನು ಕೂಡಲೇ ತೆರವುಗೊಳಿಸಿ ಯಾವುದೇ ರೀತಿಯ ಕಾನೂನಾತ್ಮಕ ಸಮಸ್ಯೆಗಳಿದ್ದಲ್ಲಿ ಉಪವಿಭಾಗಾಧಿಕಾರಿಗಳ ಸಹಾಯ ಪಡೆಯಲು ತಿಳಿಸಿದ ಅವರು, ನಿವೇಶನಗಳ ಹಂಚಿಕೆಯಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಘನ ತ್ಯಾಜ್ಯ ವಿಲೇವಾರಿಗೆ ಕ್ರಮವಹಿಸಬೇಕು ಎಂದು ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು ಸೂಚನೆ ನೀಡಿದರು.
ವಿಶ್ವ ಯೋಗ ದಿನಾಚರಣೆ ಆಯೋಜನೆಗೆ ಸೂಚನೆ
ಹಾಸನ: ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಅಚ್ಚುಕಟ್ಟಾಗಿ ಮೂಡಿಬರುವಂತೆ ಶಾಲಾ ಕಾಲೇಜು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹ ಭಾಗಿತ್ವದೊಂದಿಗೆ ಆಯೋಜಿಸಬೇಕು ಎಂದು ಜಿಲ್ಲಾಧಿ ಕಾರಿ ಅಕ್ರಂ ಪಾಷಾ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿಶ್ವ ಯೊಗ ದಿನಾಚರಣೆಗೆ ಸಂಬಂಧಿಸಿದಂತೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಜೂ. 21ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ವಿಶ್ವಯೋಗ ದಿನಾಚರಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಜೂ. 17ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿ ಕಾರಿ ಕಚೇರಿ ಆವರಣದಿಂದ ಜಿಲ್ಲಾ ಕ್ರೀಡಾಂಗಣ ದವರೆಗೆ ಜಾಥಾ ಕಾರ್ಯಕ್ರಮ ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ವಿಶ್ವ ಯೋಗ ದಿನದಂದು ಪ್ರಸ್ತುತ ಪಡಿಸಲು ನಿಗದಿಪಡಿಸಿರುವ ಆಸನಗಳ ಬಗ್ಗೆ ಶಾಲಾ ಕಾಲೇಜು ಹಾಗೂ ವಸತಿ ಶಾಲೆಗಳ ದೈಹಿಕ ಶಿಕ್ಷಕರಿಗೆ ತರಬೇತಿ ನೀಡಲು ಕ್ರಮವಹಿಸಬೇಕು ಎಂದು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯವರಿಗೆ ನಿರ್ದೇಶನ ನೀಡಿದರು.
ಯೋಗ ದಿನಾಚರಣೆಯನ್ನು ಜೂ. 21ರಂದು ಎಲ್ಲಾ ಶಾಲಾ ಕಾಲೇಜುಗಳಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ, ತಾಲೂಕು ಮಟ್ಟದಲ್ಲಿಯೂ ಅರ್ಥ ಪೂರ್ಣವಾಗಿ ಆಚರಿಸಲು ಸಿದ್ಧತೆಗೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಕುಡಿಯುವ ನೀರು, ಸ್ವಚ್ಛತೆ, ಲಘು ಉಪಹಾರ, ಕ್ರೀಡಾಂಗಣದಲ್ಲಿ ನೆಲಹಾಸಿಗೆ ವ್ಯವಸ್ಥೆ ಮಾಡಲು ಕ್ರಮವಹಿಸಬೇಕು ಎಂದರಲ್ಲದೆ, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕøತರಾದ ಗಿರೀಶ್ ಕಾರ್ನಾಡ್ ಅವರು ನಿಧನ ಹೊಂದಿದ ಹಿನ್ನಲೆಯಲ್ಲಿ 2 ನಿಮಿಷಗಳ ಕಾಲ ಮೌನಾ ಚರಣೆಯ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಎಲ್ ವೈಶಾಲಿ, ಜಿಪಂ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್, ಜಿಲ್ಲಾ ಆಯುಷ್ ಅಧಿಕಾರಿ ಪುಷ್ಪ, ವಿವಿಧ ಯೋಗ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.