ವ್ಯಕ್ತಿಪೂಜೆಯಲ್ಲಿ ತೊಡಗಿಸಿಕೊಳ್ಳಬಾರದು
ಮೈಸೂರು

ವ್ಯಕ್ತಿಪೂಜೆಯಲ್ಲಿ ತೊಡಗಿಸಿಕೊಳ್ಳಬಾರದು

January 31, 2019

ನವದೆಹಲಿ: ಕಾಂಗ್ರೆಸ್ ಶಾಸಕರೂ ಸೇರಿದಂತೆ ಯಾವುದೇ ನಾಯಕರು ವ್ಯಕ್ತಿ ಪೂಜೆಯಲ್ಲಿ ತೊಡಗಿಸಿಕೊಳ್ಳಬಾರದು. ಮೈತ್ರಿ ಸರ್ಕಾರಕ್ಕೆ ಮುಜುಗರ ತರುವಂತಹ ಹೇಳಿಕೆಗಳನ್ನು ನೀಡಬಾರದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಕಟ್ಟುನಿಟ್ಟಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಮೈತ್ರಿ ಸರ್ಕಾರಕ್ಕೆ ಮುಜುಗರ ತರುವಂತಹ ನಾಯಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಯಾವುದೇ ಶಾಸಕರು ಬಹಿರಂಗ ಹೇಳಿಕೆಗಳನ್ನು ನೀಡಬಾರದು. ಲೋಕಸಭಾ ಚುನಾವಣೆಯನ್ನು ಜೆಡಿಎಸ್‍ನಲ್ಲಿ ಹೊಂದಾಣಿಕೆ ಮಾಡಿಕೊಂಡೇ ಎದುರಿಸಲಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಮೈತ್ರಿ ಸರ್ಕಾರಕ್ಕೆ ಧಕ್ಕೆ ಉಂಟಾಗುವಂತಹ ಚಟುವಟಿಕೆ ನಡೆಯದಂತೆ ಎಚ್ಚರ ವಹಿಸಬೇಕೆಂದು ರಾಹುಲ್ ಗಾಂಧಿ ತಿಳಿಸಿದ್ದಾರೆ ಎನ್ನಲಾಗಿದೆ. ಅದೇ ವೇಳೆ ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಮೈತ್ರಿ ಸರ್ಕಾರದಲ್ಲಿ ಮೇಲಿನ ಹಂತದ ನಾಯಕರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಜೊತೆ ಚೆನ್ನಾಗಿದ್ದಾರೆ. ನಮಗೆ ಎಲ್ಲರಿಗೂ ಕುಮಾರಸ್ವಾಮಿಯವರೇ ಮುಖ್ಯಮಂತ್ರಿ. ಡಾ. ಜಿ.ಪರಮೇಶ್ವರ್ ಉಪ ಮುಖ್ಯ ಮಂತ್ರಿ. ಕೆಲವರು ಅಭಿಮಾನದಿಂದ ಸಿದ್ದರಾಮಯ್ಯ ನಮ್ಮ ಸಿಎಂ ಎನ್ನುತ್ತಾರೆ. ಕೆಳ ಹಂತದ ನಾಯಕರಲ್ಲಿ ಅಲ್ಲೊಬ್ಬರು-ಇಲ್ಲೊಬ್ಬರು ಹೇಳಿಕೆಗಳನ್ನು ನೀಡುತ್ತಿರುತ್ತಾರೆ ಎಂದ ಅವರು, ಸರ್ಕಾರದ ವಿರುದ್ಧ ಯಾರೂ ಹೇಳಿಕೆ ನೀಡಬಾರದು. ಹಾಗೆ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Translate »