ಬೆಂಗಳೂರು, ಮಾ.3-ಮೇಕೆದಾಟು ಅಣೆಕಟ್ಟು ಯೋಜನೆ ಅನು ಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸಿದ ಪಾದಯಾತ್ರೆ ಇಂದು (ಗುರುವಾರ) ಸಂಜೆ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನ ದಲ್ಲಿ ಅದ್ಧೂರಿ ಸಮಾವೇಶದೊಂದಿಗೆ ಅಂತ್ಯಗೊಂಡಿತು. ಕೊನೆಯ ದಿನವಾದ ಇಂದಿನ ಪಾದ ಯಾತ್ರೆಯು ಬೆಂಗಳೂರಿನ ಅರಮನೆ ಮೈದಾನದಿಂದ ಬೆಳಗ್ಗೆ 10.30ಕ್ಕೆ ಹೊರಟು ಕಾವೇರಿ ಥಿಯೇಟರ್, ಸಾಂಕಿಟ್ಯಾಂಕ್, ಮಲ್ಲೇಶ್ವರಂ 18ನೇ ಕ್ರಾಸ್, ಮಾರ್ಗೋಸಾ ರಸ್ತೆ, ಕೆ.ಸಿ.ಜನರಲ್ ಆಸ್ಪತ್ರೆ, ಲಿಂಕ್ ರಸ್ತೆ, ಶೇಷಾದ್ರಿಪುರಂ, ರಾಜೀವ್ ಗಾಂಧಿ ಪ್ರತಿಮೆ, ಪ್ಲಾಟ್‍ಫಾರಂ ರಸ್ತೆಯಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆ, ಕಾಟನ್‍ಪೇಟೆ ಮುಖ್ಯ ರಸ್ತೆ, ರಿಯಾಂಡ್ ಸರ್ಕಲ್, ರಾಯನ್ ಸರ್ಕಲ್ ಹಾಗೂ ಈದ್ಗಾ ಮೈದಾನದ ಮೂಲಕ ನ್ಯಾಷನಲ್ ಕಾಲೇಜು ಮೈದಾನ ತಲುಪಿತು. ಇಂದಿನ ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವರಾದ ಡಾ.ಜಿ.ಪರಮೇಶ್ವರ್, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಬಿ.ಕೆ.ಹರಿಪ್ರಸಾದ್ ಸೇರಿದಂತೆ ಹಲವಾರು ನಾಯಕರು ಭಾಗವಹಿಸಿದ್ದರು. ಇಂದಿನ ಪಾದಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಸಾಗರೋಪಾದಿಯಲ್ಲಿ ಹೆಜ್ಜೆ ಹಾಕಿದ್ದು, ಬೆಂಗಳೂರಿನ ಮೇಕ್ರಿ ಸರ್ಕಲ್, ಅರಮನೆ ಮೈದಾನ ರಸ್ತೆ, ಮಲ್ಲೇಶ್ವರಂ, ಶೇಷಾದ್ರಿಪುರಂ, ಆನಂದರಾವ್ ಸರ್ಕಲ್, ರೇಸ್ ಕೋರ್ಸ್ ರಸ್ತೆ ಸೇರಿದಂತೆ ಹಲವೆಡೆ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುವಂತಾಯಿತು. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಮುಖಂಡರು ಪಾದಯಾತ್ರೆ ಮಾರ್ಗದಲ್ಲಿದ್ದ ಗಣ್ಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದರು. ಕೆಲವೆಡೆ ನಾಯಕರಿಗೆ ಬೃಹತ್ ಸೇಬಿನ ಹಾರ ಹಾಕಿ ಕಾರ್ಯಕರ್ತರು ಸಂಭ್ರಮಿಸಿದರು. ಅಲ್ಲಲ್ಲಿ ಮುಖಂಡರ ಮೇಲೆ ಹೂಮಳೆ ಸುರಿಸಿ ಹರ್ಷ ವ್ಯಕ್ತಪಡಿಸಿದರು.