ಮೈಸೂರು: ಪರಿಸರ ಸಂರಕ್ಷಣೆ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತಂತೆ ಜನಜಾಗೃತಿ ಮೂಡಿಸುವುದು ಅಗತ್ಯವಿದ್ದು, ಈ ಬಗ್ಗೆ ಜೂನ್ ತಿಂಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಪರಿಸರ ದಿನಾಚರಣೆ ಕುರಿತು ಪೂರ್ವಭಾವಿ ಸಭೆಯಲ್ಲಿ ವಿವಿಧ ಇಲಾಖೆಗಳ ಮೂಲಕ ಪರಿಸರ ಜಾಗೃತಿಗೆ ಹಮ್ಮಿಕೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಸೂಚನೆ ನೀಡಿದರು.
ಶಾಲಾ ಕಾಲೇಜುಗಳಲ್ಲಿ ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಪರಿಸರ ಸಂರಕ್ಷಣೆಯ ಅಗತ್ಯತೆ ಬಗ್ಗೆ ವಿದ್ಯಾರ್ಥಿಗಳ ಮೂಲಕ ಜಾಥಾ ಆಯೋಜಿಸಬೇಕು. ವಿದ್ಯಾರ್ಥಿಗಳಿಗೆ ಪೇಂಟಿಂಗ್, ಪ್ರಬಂಧ ಇನ್ನಿತರ ಸ್ಪರ್ಧೆಗಳನ್ನು ಆಯೋಜಿಸಬೇಕು. ವಿವಿಧ ಹಂತದ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ನೀಡಬೇಕು ಎಂದರು.
ಅರಣ್ಯದ ಅಂಚಿನಲ್ಲಿರುವ ಗ್ರಾಮಗಳಲ್ಲಿ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕಾಗಿದ್ದು, ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಈ ಕಾರ್ಯಕ್ರಮ ಆಯೋಜಿಸಬೇಕು. ಮುಜರಾಯಿ ಇಲಾಖೆ ಗುರುತಿಸಿರುವ 8 ಪ್ರಮುಖ ದೇವಾಲಯಗಳ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಬೇಕು ಎಂದರು.
ಜಿಲ್ಲಾದ್ಯಂತ ನದಿ ತಟದ ಗ್ರಾಮಗಳಲ್ಲಿ, ಸ್ನಾನಘಟ್ಟಗಳಲ್ಲಿ ಜಾಗೃತಿ ಮೂಡಿಸಿ, ನದಿ ನೀರು ಮಲಿನವಾಗದಂತೆ ಜಾಗೃತಿ ಮೂಡಿಸಬೇಕು. ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಈ ಜವಾಬ್ದಾರಿವಹಿಸಿಕೊಳ್ಳಬೇಕು ಎಂದು ಸೂಚಿಸಿದರು.
ಮಳೆಗಾಲ ಆರಂಭವಾಗಿರುವುದರಿಂದ ಡೆಂಗ್ಯೂ, ಮಲೇರಿಯಾ ಮುಂತಾದ ಸಾಂಕ್ರಾಮಿಕ ರೋಗಗಳ ಹರಡುವ ಸಾಧ್ಯತೆ ಇದೆ. ಆದ್ದರಿಂದ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳ ಆವರಣಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ, ಆಸ್ಪತ್ರೆಯ ಆವರಣದಿಂದಲೇ ಸ್ವಚ್ಛತಾ ಕಾರ್ಯ ಆರಂಭಿಸಲು ತಿಳಿಸಿದರು.
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ ವತಿಯಿಂದ ಸ್ಥಳೀಯ ಸಂಘ ಸಂಸ್ಥೆಗಳ ನೆರವಿನಿಂದ ನಂಜನಗೂಡಿನಲ್ಲಿ ಕಬಿನಿ ನದಿಯಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಜೂ.2ರಂದು ಕುಕ್ಕರಹಳ್ಳಿ ಕೆರೆ ಆವರಣದಲ್ಲಿ ಪೇಂಟಿಂಗ್ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಜೂ.5ರಂದು ಸೈಕ್ಲಿಂಗ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಸಭೆಯಲ್ಲಿ ಅರಣ್ಯ ಉಪ ಸಂರಕ್ಷಣಾಧಿಕಾರಿ ಡಾ.ಹನುಮಂತಪ್ಪ, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಕೆ.ಹೆಚ್.ಜಗದೀಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವಕುಮಾರಸ್ವಾಮಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಾದ ಬಿ.ಎಂ.ಪ್ರಕಾಶ್, ಎಂ.ಜಿ.ಯತೀಶ್ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ರಾಮಕೃಷ್ಣೇಗೌಡ, ಮುಂತಾದವರು ಉಪಸ್ಥಿತರಿದ್ದರು.