ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಘಟಾನುಘಟಿಗಳಿಗೆ ಅಗ್ನಿ ಪರೀಕ್ಷೆ
ಮೈಸೂರು

ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಘಟಾನುಘಟಿಗಳಿಗೆ ಅಗ್ನಿ ಪರೀಕ್ಷೆ

April 18, 2019

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಸೇರಿದಂತೆ ಕೆಲವು ಘಟಾನುಘಟಿಗಳ ರಾಜಕೀಯ ಭವಿಷ್ಯವನ್ನು ನಾಳೆ ಮತದಾರರು ನಿರ್ಧರಿಸಲಿದ್ದಾರೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಬೆಳಿಗ್ಗೆ 7ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ. ಈ ಘಟಾನುಘಟಿಗಳಲ್ಲದೆ, ಹಿರಿಯ ಸಂಸದ ಕೆ.ಹೆಚ್. ಮುನಿಯಪ್ಪ, ಬಸವರಾಜ್, ಸಚಿವ ಕೃಷ್ಣಬೈರೇಗೌಡ, ಸಂಸದರಾದ ಶೋಭಾ ಕರಂದ್ಲಾಜೆ,

ಪ್ರತಾಪ್ ಸಿಂಹ, ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸಪ್ರಸಾದ್ ಅವರೂ ನಾಳೆ ಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿ ಕಣದಲ್ಲಿದ್ದಾರೆ. ಇದಲ್ಲದೆ, ದೇವೇಗೌಡರ ಮೊಮ್ಮಕ್ಕಳಾದ ಪ್ರಜ್ವಲ್ ರೇವಣ್ಣ ಹಾಸನದಿಂದಲೂ, ಮತ್ತೊಬ್ಬ ಮೊಮ್ಮಗ ಹಾಗೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಮೊದಲ ಬಾರಿಗೆ ಕಣಕ್ಕಿಳಿದಿದ್ದಾರೆ. ಬಿಜೆಪಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 27 ಕ್ಷೇತ್ರಗಳಲ್ಲಿ ಕಣಕ್ಕಿಳಿದು, ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ, ಚಿತ್ರನಟಿ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ವ್ಯಕ್ತಪಡಿಸಿದೆ.

ಈ ಕ್ಷೇತ್ರದಲ್ಲೇ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿದ್ದು, ಆಯೋಗ ಈ ಕ್ಷೇತ್ರವನ್ನು ಅತೀ ಸೂಕ್ಷ್ಮ ಎಂದು ಗುರುತಿಸಿದೆ. ದೇವೇಗೌಡರು ತಮ್ಮ ಎಂದಿನ ಹಾಸನ ಲೋಕಸಭಾ ಕ್ಷೇತ್ರ ತೊರೆದು ತುಮಕೂರಿನಿಂದ ಸ್ಪರ್ಧಿಸಿದ್ದಾರೆ. ಇವರಿಗೆ ಸ್ಥಳೀಯ ಮತದಾರರ ಸ್ಪಂದನೆ ಹೇಗಿದೆ ಎಂಬುದನ್ನು ತಿಳಿಯಲು ಮೇ 23ರವರೆಗೆ ಕಾಯಬೇಕಿದೆ.

ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‍ನ ರಾಹುಲ್ ಗಾಂಧಿ ಮೊದಲ ಹಂತದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಲ್ಲದೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ರೋಡ್ ಶೋ ಸಹ ನಡೆಸಿದ್ದಾರೆ. ನಾಳೆ ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಪೂರಕ ಸಿದ್ಧತೆ ಮಾಡಿಕೊಂಡಿದೆ.

Translate »