ಮೈಸೂರು, ಜು.4(ಪಿಎಂ)- ಕೊರೊನಾ ಸೋಂಕು ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಮೈಸೂರು ಕನ್ನಡ ವೇದಿಕೆಯಿಂದ ಶನಿವಾರ ಪ್ರತಿಭಟಿಸಲಾಯಿತು.
ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡ ಪ್ರತಿಭಟನಾ ಕಾರರು, ರಾಜ್ಯದ ಜನ ಆತಂಕಕ್ಕೆ ಒಳಗಾಗಿದ್ದಾರೆ. ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಮೃತದೇಹವನ್ನು ಪ್ರಾಣಿಗಿಂತಲೂ ಕೀಳಾಗಿ ಕಾಣುತ್ತಿರುವ ಪ್ರಕರಣ ಹೆಚ್ಚುತ್ತಿದ್ದರೂ ಸರ್ಕಾರ ಮೌನಕ್ಕೆ ಶರಣಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೊರೊನಾ ಸಂಬಂಧ ಮೀಸಲಿಟ್ಟ ಹಣದ ದುರ್ಬಳಕೆ ಆರೋಪ ಕೇಳಿಬರುತ್ತಿದೆ. ಕೊರೊನಾ ಬಿಕ್ಕಟ್ಟಿನ ಸನ್ನಿವೇಶದಲ್ಲಿ ಭ್ರಷ್ಟಾಚಾರ ನಡೆಸುವುದು ದುರಂತದ ಸಂಗತಿ. ಖಾತೆ ನಿಭಾಯಿಸುವಲ್ಲಿ ವಿಫಲರಾದ ಆರೋಗ್ಯ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ, ಕಾರ್ಯಕರ್ತರಾದ ನಾಲಾ ಬೀದಿ ರವಿ, ಪ್ಯಾಲೇಸ್ ಬಾಬು, ಪರಿಸರ ಚಂದ್ರು ಮತ್ತಿತರರಿದ್ದರು.