ಮಂಡ್ಯ : ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜುಲೈ 20 ರಂದು ಜಲಾಶಯಕ್ಕೆ ಬಾಗೀನ ಅರ್ಪಿಸಲಿದ್ದಾರೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು.
ಸೋಮವಾರ ಮಂಡ್ಯದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗುತ್ತಿರುವುದರಿಂದ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿರುವುದು ರೈತರಲ್ಲಿ ಸಂತಸ ತಂದಿದೆ.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಸೇರಿ ದಂತೆ ರಾಜ್ಯ ಸರ್ಕಾರದ ಇತರೆ ಸಂಪುಟ ಸಚಿವರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಸಚಿವರು ಹಾಗೂ ಶಾಸಕರು ಜಲಾಶಯಕ್ಕೆ ಬಾಗೀನ ಅರ್ಪಣೆ ಕಾರ್ಯ ಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕೃಷ್ಣರಾಜಸಾಗರ ಜಲಾಶಯಕ್ಕೆ ಹೇಮಾ ವತಿ ಜಲಾಶಯದಿಂದ 25 ಸಾವಿರ ಕ್ಯೂಸೆಕ್ಸ್, ಹಾರಂಗಿ ಜಲಾಯದಿಂದ 13 ಸಾವಿರ ಕ್ಯೂಸೆಕ್ಸ್ ಸೇರಿದಂತೆ ಒಟ್ಟು 60 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ಒಳಹರಿವು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ 80 ಸಾವಿರ ಕ್ಯೂಸೆಕ್ಸ್ ಹಾಗೂ ಕಬಿನಿ ಜಲಾಶಯದಿಂದ 45 ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ ಎಂದರು.
ಮೊದಲಿಗೆ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ಅಂದು ಬೆಳಿಗ್ಗೆ 7 ಗಂಟೆಗೆ ಕೊಡಗು ಜಿಲ್ಲೆಯ ಭಾಗಮಂಡಲದ ತಲ ಕಾವೇರಿಯಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸುವರು. ಬಳಿಕ, ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ಆಗಮಿಸಿ ಚಾಮುಂಡಿಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ನಂತರ ಕಬಿನಿ ಜಲಾಶಯಕ್ಕೆ ಬಾಗೀನ ಅರ್ಪಿಸುವರು. ಮಧ್ಯಾಹ್ನ 12.30ಕ್ಕೆ ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗೀನ ಅರ್ಪಿಸಿ, ಮಂಡ್ಯ ನಗರದಲ್ಲಿ ನಡೆಯುವ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ತಿಳಿಸಿದರು.
ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿ ರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರು ರೈತರಿಗೆ 40 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದು, ಮಂಡ್ಯ ಜಿಲ್ಲೆಯಲ್ಲಿ 3900 ಕೋಟಿ ರೈತರ ಸಾಲ ಮನ್ನಾ ಮಾಡಲಾಗಿದೆ. ರೈತರು ಯಾವುದೇ ಕಾರಣಕ್ಕೂ ಧೈರ್ಯ ಕಳೆದುಕೊಳ್ಳಬಾರದು. ರೈತರ ಬೆನ್ನಿಗೆ ನಿಂತು ಸರ್ಕಾರ ಕೆಲಸ ಮಾಡಲಿದ್ದು, ರೈತರ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಶ್ರಮಿಸಲಿದೆ. ಮೈಷುಗರ್ ಸೇರಿದಂತೆ ಮಂಡ್ಯ ಜಿಲ್ಲೆಯ ಅಭಿವೃದ್ಧಿಗಾಗಿ ಹಲವು ಅನುದಾನವನ್ನು ಸರ್ಕಾರ ಮೀಸಲಿರಿಸಿದ್ದು, ರಾಜ್ಯ ಸೇರಿದಂತೆ ಈ ಭಾಗದ ಜನರ ಋಣ ತಿರಿಸಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಶ್ರೀನಿವಾಸ್, ಸುರೇಶ್‍ಗೌಡ, ಕೆ.ಟಿ. ಶ್ರೀಕಂಠೇಗೌಡ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವ ಹಿಸಿದ್ದರು.