ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಮೈಸೂರು, ಅ.27(ಆರ್‍ಕೆಬಿ)- ಕುಂಚಿಟಿಗ ಸಮುದಾಯವನ್ನು ಕೇಂದ್ರದ ಇತರೆ ಹಿಂದುಳಿದ ವರ್ಗಗಳ (ಓಬಿಸಿ) ಪಟ್ಟಿಗೆ ಸೇರಿ ಸಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಈ ವಿಚಾರವಾಗಿ ಮೈಸೂರು ಕುಂಚಿಟಿಗರ ಸಂಘದ ಪರವಾಗಿ ಕಾರ್ಯದರ್ಶಿ ಎಂ.ಅರ್.ಯೋಗೀಶ್ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಮುಖ್ಯ ನ್ಯಾಯಮೂರ್ತಿ ರೀತುರಾಜ್ ಅವಸ್ಥಿ ಅವರ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿದ ಸಂದರ್ಭ ದಲ್ಲಿ ಕೇಂದ್ರ ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಇತರೆ ಹಿಂದುಳಿದ ವರ್ಗಗಳು ಓಬಿಸಿ ಪಟ್ಟಿ ತಯಾರಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ವಹಿಸಿ ಇತ್ತೀಚೆಗೆ ಸಂವಿಧಾನಕ್ಕೆ 127ನೇ ತಿದ್ದುಪಡಿ ಆಗಿದೆ. ಇದಕ್ಕೆ ಸಂಸತ್ತಿನ ಉಭಯ ಸದನಗಳ ಒಪ್ಪಿಗೆ ಸಿಕ್ಕಿದೆ. ಹೀಗಾಗಿ ಈಗ ಒಬಿಸಿ ಪಟ್ಟಿ ರಾಜ್ಯ ಸರ್ಕಾರಗಳಿಂದ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಕೇಂದ್ರ ಸರ್ಕಾರಕ್ಕೆ ಬರಬೇಕು. ಕುಂಚಿಟಿಗ ಸಮುದಾಯವನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸುವ ಪ್ರಸ್ತಾವನೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪರಿಶೀಲನೆ ಯಲ್ಲಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ವಾದ ಆಲಿಸಿದ ನ್ಯಾಯಪೀಠ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿ, ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ನಿರ್ದೇಶನ ನೀಡಿ, ವಿಚಾರಣೆಯನ್ನು ಡಿ.2ಕ್ಕೆ ಮುಂದೂಡಿದೆ ಎಂದು ಮೈಸೂರು ಸಂಘದ ಖಜಾಂಚಿ ಪ್ರದೀಪ್‍ಕುಮಾರ್ ತಿಳಿಸಿದ್ದಾರೆ.