ರಾಜ್ಯದಲ್ಲಿ ಅಧಿಕ ವಿದ್ಯುತ್  ಉತ್ಪಾದನೆ: ದೀರ್ಘಾವಧಿ ಒಪ್ಪಂದದ  ಮೂಲಕ ಮಾರಾಟಕ್ಕೆ ನಿರ್ಧಾರ ಇಂಧನ ಖಾತೆ ಹೊಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ವಿದ್ಯುತ್ ಕುರಿತ ಪ್ರಗತಿ ಪರಿಶೀಲನಾ ಸಭೆ
News

ರಾಜ್ಯದಲ್ಲಿ ಅಧಿಕ ವಿದ್ಯುತ್ ಉತ್ಪಾದನೆ: ದೀರ್ಘಾವಧಿ ಒಪ್ಪಂದದ ಮೂಲಕ ಮಾರಾಟಕ್ಕೆ ನಿರ್ಧಾರ ಇಂಧನ ಖಾತೆ ಹೊಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ವಿದ್ಯುತ್ ಕುರಿತ ಪ್ರಗತಿ ಪರಿಶೀಲನಾ ಸಭೆ

June 3, 2021

ಬೆಂಗಳೂರು, ಜೂ.2(ಕೆಎಂಶಿ)- ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಬೇಡಿಕೆಗಿಂತ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೀರ್ಘಾವಧಿ ಒಪ್ಪಂದದ ಮೂಲಕ ಮಾರಾಟಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ರಾಜ್ಯದ ವಿದ್ಯುತ್ ಪೂರೈಕೆ ಸ್ಥಿತಿಗತಿ ಹಾಗೂ ಕೈಗಾರಿಕೆ ಗಳಿಗೆ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯ ಸ್ಥಾಪಿತ ಸಾಮಥ್ರ್ಯ 30,562.56 ಮೆಗಾವ್ಯಾಟ್ ನಷ್ಟಿದ್ದು, ಶೇ.50ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸಲಾಗು ತ್ತಿದೆ. ಪ್ರಸ್ತುತ ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ರಾಜ್ಯದ ಜಲಾಶಯಗಳಲ್ಲಿ ಸಾಕಷ್ಟು ನೀರು ಇರುವುದರಿಂದ ಹಾಗೂ ಈ ಬಾರಿ ಮುಂಗಾರು ಸಾಮಾನ್ಯವಾಗಿರುವುದು ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ವಿದ್ಯುತ್ ಕೊರತೆಯಾಗದು ಎಂದು ಅಧಿಕಾರಿಗಳು ವಿವರಿಸಿದರು.

ವಿದ್ಯುತ್ ಪ್ರಸರಣ ಜಾಲದಲ್ಲಿ ವಿದ್ಯುತ್ ಸೋರಿಕೆ ಅತೀ ಕಡಿಮೆ ಅಂದರೆ ಸುಮಾರು ಶೇ.3ರಷ್ಟು ಇದ್ದು, ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ವಿತರಣಾ ಜಾಲದಲ್ಲಿಯೂ ವಿದ್ಯುತ್ ಸೋರಿಕೆ ಶೇ.5ಕ್ಕಿಂತ ಕಡಿಮೆಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ನೀರಾವರಿ ಪಂಪ್‍ಸೆಟ್‍ಗಳಿಗೆ 7 ಗಂಟೆ ವಿದ್ಯುತ್ ಪೂರೈಕೆಗೆ ಅನುವಾಗುವಂತೆ ಸ್ಟೇಷನ್‍ಗಳು ಹಾಗೂ ಫೀಡರ್‍ಗಳನ್ನು ಅಳವಡಿಸುವ ಕಾರ್ಯ ಪ್ರಗತಿಯಲ್ಲಿದ್ದು, 2022ರ ಮಧ್ಯಭಾಗದಲ್ಲಿ ಪೂರ್ಣಗೊಳ್ಳಲಿದೆ. ಪ್ರಸ್ತುತ 26 ಸ್ಟೇಷನ್‍ಗಳು ಹಾಗೂ 182 ಫೀಡರುಗಳ ಕಾಮಗಾರಿ ಪೂರ್ಣಗೊಂಡಿದೆ.

ರಾಜ್ಯದ ಒಟ್ಟಾರೆ ವಿದ್ಯುತ್ ಬಳಕೆಯ ಶೇ.18ರಷ್ಟು ಕೈಗಾರಿಕೆಗಳಿಗೆ ಬಳಕೆಯಾಗುತ್ತಿದೆ. ಕೈಗಾರಿಕೆಗಳಿಗೆ ನಿರಂತರವಾಗಿ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡುವಲ್ಲಿ ತಲೆ ದೋರುವ ತೊಡಕುಗಳನ್ನು ನಿವಾರಿಸಲು ಕೈಗಾರಿಕಾ ಇಲಾಖೆ ಹಾಗೂ ಇಂಧನ ಇಲಾಖೆ ಅಧಿಕಾರಿಗಳು ಕಾಲ-ಕಾಲಕ್ಕೆ ಸಭೆ ನಡೆಸಿ, ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರು ಸೂಚಿಸಿದರು. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯ ದರ್ಶಿ ಡಾ.ಇ.ವಿ.ರಮಣರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ.ಕುಮಾರ ನಾಯಕ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜ್‍ಕುಮಾರ್ ಖತ್ರಿ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Translate »