ಮೈಸೂರು, ಆ.18(ಪಿಎಂ)- ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಗಳು ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿವೆ ಎಂದು ಆರೋಪಿಸಿರುವ ಹಿಂದೂ ಜಾಗರಣ ವೇದಿಕೆ ಮೈಸೂರು ಘಟಕ, ಈ ಎರಡೂ ಸಂಘಟನೆಗಳನ್ನು ನಿಷೇಧಿಸಲು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.
ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಉಪ ತಹಸೀಲ್ದಾರ್ ಬೋರಪ್ಪ ಅವರಿಗೆ ವೇದಿಕೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಪದೇ ಪದೆ ಹಿಂದೂಗಳ ಮೇಲೆ ದಾಳಿ ನಡೆಸುತ್ತಿರುವ ಎಸ್‍ಡಿಪಿಐ ಮತ್ತು ಪಿಎಫ್‍ಐ ಕಾರ್ಯಕರ್ತರು, ಆ.11ರಂದು ರಾತ್ರಿ ಬೆಂಗಳೂರಿನಲ್ಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮತ್ತು ಅವರ ನೆರೆಹೊರೆಯ ಹತ್ತಾರು ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೆ, ಸ್ಥಳದಲ್ಲಿದ್ದ ವಾಹನಗಳ ಮೇಲೂ ದಾಳಿ ನಡೆಸಿ, ಜಖಂಗೊಳಿಸಿದ್ದರಲ್ಲದೆ, ಬೆಂಕಿ ಹಚ್ಚಿ ನಾಶಪಡಿಸಿ ದ್ದಾರೆ. ಆ ಮೂಲಕ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಗೊಳಿಸಿ ನಷ್ಟ ಉಂಟು ಮಾಡಿದ್ದಾರೆ. ಅಲ್ಲದೆ, ಕರ್ತವ್ಯ ನಿರತ ಪೊಲೀಸರ ಮೇಲೆಯೂ ದಾಳಿ ನಡೆಸಿ ಪೈಶಾಚಿಕ ಕೃತ್ಯ ಮೆರೆದಿದ್ದಾರೆ. ಇದು ಅತ್ಯಂತ ಖಂಡನೀಯ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಸ್‍ಡಿಪಿಐ ಮತ್ತು ಪಿಎಫ್‍ಐ ಸಂಘಟನೆಗಳ 1,600 ಕಾರ್ಯಕರ್ತರಿಗೆ ಸಂಬಂಧಿ ಸಿದ 175 ಪ್ರಕರಣಗಳನ್ನು ಹಿಂಪಡೆಯಿತು. ಆ ಮೂಲಕ ಸದರಿ ಸಂಘಟನೆಗಳ ಪರವಾಗಿ ಹಿಂದಿನ ಕಾಂಗ್ರೆಸ್ ಸರ್ಕಾರ ನಿಂತದ್ದೇ ಇಂತಹ ದುಸ್ಥಿತಿಗೆ ಕಾರಣ. ಈ ಸಂಘಟನೆಗಳನ್ನು ರಕ್ಷಿಸುವ ಮೂಲಕ ಕಾಂಗ್ರೆಸ್ ಪಕ್ಷವು ದೇಶದಲ್ಲಿ ಅಶಾಂತಿ ಉಂಟು ಮಾಡುತ್ತಿದೆ ಎಂದು ಮನವಿಯಲ್ಲಿ ದೂರಲಾಗಿದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಈ ಸಂಘಟನೆಗಳನ್ನು ನಿಷೇಧಿಸಲು ಹಾಗೂ ಈ ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಿ ದುಷ್ಕರ್ಮಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ಅವರಿಗೆ ಕಠಿಣ ಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡ ಬೇಕೆಂದು ರಾಜ್ಯಪಾಲರನ್ನು ಮನವಿಯಲ್ಲಿ ಕೋರಲಾಗಿದೆ.