ಹಾಕಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ
ಕೊಡಗು

ಹಾಕಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ

December 13, 2018

ಸೋಮವಾರಪೇಟೆ:  ಮೊಗೇರ ಸೇವಾ ಸಮಾಜದ ಕುಸುಬೂರು ಗ್ರಾಮ ಶಾಖೆಯ ವತಿಯಿಂದ ಹಾಕಿ ಕ್ರೀಡೆಯಲ್ಲಿ ಸಾಧನೆ ಮಾಡಿದ ಬಳಗುಂದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ತಾಲೂಕು ಮೊಗೇರ ಸೇವಾ ಸಮಾಜದ ಅಧ್ಯಕ್ಷ ದಾಮೋದರ್ ಮಾತನಾಡಿ, ಗ್ರಾಮೀಣ ಭಾಗದ ಸರಕಾರಿ ಶಾಲೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ನಾಡಿಗೆ ಕೀರ್ತಿ ತಂದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಪಟ್ಟಣ ಪಂಚಾಯಿತಿ ಸದಸ್ಯ ಪಿ.ಕೆ. ಚಂದ್ರು ಮಾತನಾಡಿ, ವಿದ್ಯಾರ್ಥಿಗಳು ಪಠ್ಯದೊಂದಿಗೆ ಕ್ರೀಡೆಯಲ್ಲೂ ಸಾಧನೆ ಮಾಡುವ ಮೂಲಕ ಉನ್ನತ ಹುದ್ದೆಗೇರಬೇಕೆಂದು ಆಶಿಸಿದರು.

ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಬಾಲಕಿಯರ ಹಾಕಿ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿ ಸುತ್ತಿರುವ ಬಳಗುಂದದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಜೆ. ರಕ್ಷಿತಾ, ಪೊನ್ನಂಪೇಟೆಯಲ್ಲಿ ನಡೆದ ರಾಜ್ಯ ಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಎಂ. ರಶ್ಮಿ, ಹಾಸನದಲ್ಲಿ ನಡೆದ ವಿಭಾಗ ಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಎಲ್. ಮಮತಾ, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಮೇಶ್ ಹಾಗೂ ಮುಖ್ಯೋಪಾಧ್ಯಾಯಿನಿ ಸುಶೀಲಾರವರುಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೊಗೇರ ಸಮಾಜದ ಕುಸುಬೂರು ಗ್ರಾಮ ಶಾಖೆಯ ಅಧ್ಯಕ್ಷ ದಿನೇಶ್ ವಹಿಸಿದ್ದರು.
ತಾಲೂಕು ಉಪಾಧ್ಯಕ್ಷ ರಾಮಚಂದ್ರ, ಕುಸುಬೂರು ಶಾಖೆಯ ಮಾಜಿ ಅಧ್ಯಕ್ಷ ಶಿವಕುಮಾರ್ ಹಾಗೂ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Translate »