ಮಡಿಕೇರಿಯಲ್ಲಿ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ: ಪ್ರತಿ 2ನೇ ಶುಕ್ರವಾರ ಸಾರ್ವಜನಿಕ ಅಹವಾಲು ಸ್ವೀಕಾರ
ಕೊಡಗು

ಮಡಿಕೇರಿಯಲ್ಲಿ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ: ಪ್ರತಿ 2ನೇ ಶುಕ್ರವಾರ ಸಾರ್ವಜನಿಕ ಅಹವಾಲು ಸ್ವೀಕಾರ

August 4, 2018

ಮಡಿಕೇರಿ:  ಮಡಿಕೇರಿ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಪ್ರತೀ ತಿಂಗಳ ಎರಡನೇ ಶುಕ್ರವಾರ (ರಜಾ ದಿನ ಹೊರತುಪಡಿಸಿ) ಬೆಳಗ್ಗೆಯಿಂದ ಸಂಜೆವರೆಗೆ ಸಾರ್ವಜನಿಕರ ಕುಂದುಕೊರತೆ ಆಲಿಸುವ ಸಭೆ ನಡೆಸಲಾಗುವುದು ಎಂದು ಕೊಡಗು ಜಿಲ್ಲಾ ನೂತನ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನ ಮೊದಲ ಮಹಡಿಯಲ್ಲಿರುವ ತಮ್ಮ ಕಚೇರಿಯನ್ನು ಉದ್ಘಾಟಿಸಿ ಬಳಿಕ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವು ಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಆ ನಿಟ್ಟಿನಲ್ಲಿ ಪ್ರತೀ ಎರಡನೇ ಶುಕ್ರವಾರ ಸಾರ್ವಜನಿಕ ಅಹವಾಲು ಸ್ವೀಕರಿಸಲಾಗುವುದು ಎಂದು ತಿಳಿಸಿದರು.

ಸ್ಥಳೀಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರ ಸಲಹೆ, ಸಹಕಾರ, ಅಭಿಪ್ರಾಯ ಪಡೆದು ಸಮಸ್ಯೆಗಳನ್ನು ತ್ವರಿತ ವಾಗಿ ಇತ್ಯರ್ಥಪಡಿಸಲು ಪ್ರಯತ್ನಿಸಲಾಗು ವುದು ಎಂದ ಅವರು, ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಜೂನ್/ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಅಪಾರ ನಷ್ಟ ಉಂಟಾಗಿದ್ದು, ಈ ಸಂಬಂಧ, ಮುಖ್ಯಮಂತ್ರಿಗಳು ಕೊಡಗು ಜಿಲ್ಲೆಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ 100 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ಸಾ.ರಾ.ಮಹೇಶ್ ಅವರು ತಿಳಿಸಿದರು. ಕೊಡಗು ಜಿಲ್ಲೆ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಹೆಚ್ಚಿನ ಆದ್ಯತೆ ನೀಡಲಾಗುವುದು.

ಅನಧಿಕೃತ ಹೋಂ ಸ್ಟೇಗಳ ನೋಂದಣಿಗೆ ಸಂಬಂಧಿಸಿದಂತೆ ಆಗಸ್ಟ್, 2 ರವರೆಗೆ ಕಾಲಾವಕಾಶ ನೀಡಲಾಗಿತ್ತು, ಈ ಸಂಬಂಧ ಸಾಕಷ್ಟು ಅರ್ಜಿಗಳು ಬಂದಿದ್ದು, ಇವು ಗಳಿಗೆ ಅನುಮತಿ ನೀಡಲಾಗುವುದು. ಉಳಿದಂತೆ ಅನಧಿಕೃತ ಹೋಂ ಸ್ಟೇಗಳ ವಿರುದ್ಧ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿ ವರು ಹೇಳಿದರು.

ಹೋಂ ಸ್ಟೇಗಳು ಸುತ್ತಮುತ್ತ ಶುಚಿತ್ವ ಕಾಪಾಡಬೇಕು. ಉತ್ತಮ ನೈಸರ್ಗಿಕ ವಾತಾವರಣ ನಿರ್ಮಿಸಬೇಕು. ಆ ನಿಟ್ಟಿನಲ್ಲಿ ಜಾಗೃತಿ ವಹಿಸುವುದು ಅವಶ್ಯ ಎಂದರು. ನಗರ, ಪಟ್ಟಣ ವ್ಯಾಪ್ತಿಯಲ್ಲಿ ಮನೆ ನಿರ್ಮಾಣಕ್ಕೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕ್ರಮ ವಹಿಸಲಾಗುವುದು, ಈ ಸಂಬಂಧ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಇತ್ಯರ್ಥಪಡಿಸಲಾಗುವುದು. ಮಡಿಕೇರಿ ದಸರಾ ಸಂಬಂಧಿಸಿದಂತೆ ಹೆಚ್ಚಿನ ಅನುದಾನ ಬಿಡುಗಡೆಗೆ ಕ್ರಮವಹಿಸಲಾಗುವುದು ಎಂದು ಅವರು ತಿಳಿಸಿದರು.

Translate »