ಮೈಸೂರು: ರಾಷ್ಟ್ರೀಯ ಲೋಕದಳ ಪಕ್ಷವು ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ರಾಜ್ಯದ 5 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಜ್ಜಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ರಮೇಶ್ ಗುರುದೇವ ತಿಳಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಚೌಧರಿ ಅಜಿತ್ ಸಿಂಗ್ ನೇತೃತ್ವದ ರಾಷ್ಟ್ರೀಯ ಲೋಕದಳ ಪಕ್ಷ, ರಾಜ್ಯದ ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ, ಶಿವಮೊಗ್ಗ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷ ಕಣಕ್ಕಿಳಿಯಲಿದೆ. ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಅಂತಿಮ ಹಂತದಲ್ಲಿದೆ ಎಂದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಚಿಂತಿಸಲಾಗುತ್ತಿದ್ದು, ಅಭ್ಯರ್ಥಿ ಆಯ್ಕೆ ಪ್ರಯತ್ನ ನಡೆದಿದೆ. ಹೀಗಾಗಿ ಪಕ್ಷದ ಬಲವರ್ಧನೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ರವಿಚಂದ್ರನ್, ಕಾರ್ಯದರ್ಶಿ ಚಂದ್ರ ಶೇಖರ್, ಮೈಸೂರು ಜಿಲ್ಲಾಧ್ಯಕ್ಷ ಟಿ.ನಾಗೇಂದ್ರ ಇತರರು ಉಪಸ್ಥಿತರಿದ್ದರು.