ಎಸ್‍ಸಿ, ಎಸ್‍ಟಿ ನೌಕರರ ಮುಂಬಡ್ತಿಗೆ ಮೀಸಲಾತಿ ಅಗತ್ಯವಿಲ್ಲ

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಸರ್ಕಾರಿ ಉದ್ಯೋಗದ ಬಡ್ತಿಯಲ್ಲಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತನ್ನ ಅಂತಿಮ ತೀರ್ಪು ನೀಡಿದ್ದು, ಸರ್ಕಾರಿ ಉದ್ಯೋಗದ ಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ ಎಂದು ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಕೆ.ಸಿಕ್ರಿ ನೇತೃತ್ವದ ಪಂಚ ಸದಸ್ಯ ಪೀಠ ಇಂದು ತನ್ನ ಅಂತಿಮ ತೀರ್ಪು ಪ್ರಕಟಿಸಿದ್ದು, ಸರ್ಕಾರಿ ಉದ್ಯೋಗದ ಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ ಎಂದು ಹೇಳಿದೆ. ಬುಧವಾರ ಈ ಕುರಿತು ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್‍ನ ಐವರು ಸದಸ್ಯರ ಸಂವಿಧಾನಿಕ ಪೀಠ, 2006ರ ಎಂ.ನಾಗರಾಜು ಅವರ ತೀರ್ಪಿನ ಮರು ಪರಿಶೀಲನೆ ಮಾಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

2006ರ ತೀರ್ಪಿನ ಪುನರ್ ಪರಿಶೀಲನಾ ಅರ್ಜಿಗಳ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ, ಎಂ.ನಾಗರಾಜ್ ಪ್ರಕರಣದ ತೀರ್ಪನ್ನು ಏಳು ನ್ಯಾಯಮೂರ್ತಿಗಳ ನ್ಯಾಯಪೀಠಕ್ಕೆ ವರ್ಗಾಯಿಸುವ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ಆರ್.ಎಫ್.ನಾರಿಮನ್ ಪ್ರಕಟಿಸಿದರು.

ತೀರ್ಪು ಮರು ಪರಿಶೀಲಿಸುವಂತೆ ಮತ್ತು ಷರತ್ತುಗಳನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರ, ವಿವಿಧ ರಾಜ್ಯ ಸರ್ಕಾರಗಳು ಹಾಗೂ ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿ ಸಿತ್ತು. ಪ್ರಾತಿನಿಧ್ಯದ ಕೊರತೆ ಮತ್ತು ಒಟ್ಟು ಹಿಂದುಳಿದಿರುವಿಕೆಯ ದತ್ತಾಂಶಗಳ ಆಧಾರದಲ್ಲಿ ಬಡ್ತಿ ಮೀಸಲಾತಿ ನೀಡಬೇಕು ಎಂದು ಏಳು ನ್ಯಾಯಮೂರ್ತಿಗಳನ್ನು ಒಳಗೊಂಡ ಸಂವಿಧಾನ ಪೀಠವು ಎಂ.ನಾಗರಾಜ್ ಪ್ರಕರಣದಲ್ಲಿ 2006ರಲ್ಲಿ ತೀರ್ಪು ನೀಡಿತ್ತು. ಎಸ್‍ಸಿ ಮತ್ತು ಎಸ್‍ಟಿ ಸಮುದಾಯವು ಒಮ್ಮೆ ಉದ್ಯೋಗಕ್ಕೆ ಸೇರಿದ ಮೇಲೆ ಅವರ ಹಿಂದುಳಿದಿರುವಿಕೆ ನಿವಾರಣೆಯಾಗಿರುತ್ತದೆ. ದರ್ಜೆ-3 ಮತ್ತು ದರ್ಜೆ-4ರ ಹುದ್ದೆಗಳಿಗೆ ಮಾತ್ರ ಬಡ್ತಿ ಮೀಸಲಾತಿ ನೀಡಬಹುದು.

ಉನ್ನತ ಹುದ್ದೆಗಳಲ್ಲಿರುವವರಿಗೆ ಬಡ್ತಿ ಮೀಸಲು ಸೌಲಭ್ಯ ಕಲ್ಪಿಸಬಾರದು ಎಂದು ಉದ್ಯೋಗದಲ್ಲಿ ಬಡ್ತಿ ಮೀಸಲು ವಿರೋಧಿಸುತ್ತಿರುವ ಅರ್ಜಿದಾರರ ಪರ ಹಿರಿಯ ವಕೀಲ ರಾಕೇಶ್ ದ್ವಿವೇದಿ ವಾದಿಸಿದ್ದರು. ದೀರ್ಘ ಕಾಲದಿಂದ ಶೋಷಣೆಗೆ ಒಳಗಾಗಿರುವ ಈ ಸಮುದಾಯಗಳಿಗೆ ಬಡ್ತಿಯಲ್ಲಿ ಮೀಸಲಾತಿ ನೀಡಲೇಬೇಕು ಎಂದು ಕೇಂದ್ರ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಬಲವಾಗಿ ಪ್ರತಿಪಾದಿಸಿದ್ದರು. ಈ ಪ್ರಕರಣದ ವಿಚಾರಣೆಯನ್ನು ಸಪ್ತ ನ್ಯಾಯಮೂರ್ತಿ ಗಳ ಪೀಠಕ್ಕೆ ವರ್ಗಾವಣೆ ಮಾಡಲು ಸಂವಿಧಾನಿಕ ಪೀಠ ನಿರಾಕರಿಸಿದೆ. ಪ್ರಾತಿನಿಧ್ಯ ಕೊರತೆ ಮತ್ತು ಹಿಂದುಳಿದಿರುವಿಕೆಯ ದತ್ತಾಂಶಗಳ ಆಧಾರದಲ್ಲಿ ಬಡ್ತಿ ಮೀಸಲಾತಿ ನೀಡಬೇಕು ಎಂದು 2006ರ ತೀರ್ಪಿನಲ್ಲಿ ಹೇಳಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಈ ನಿಯಮ ಕೈ ಬಿಡಬೇಕು ಎಂದು ಒತ್ತಾಯಿಸಿತ್ತು.